ಸುಕ್ಷೇತ್ರ ಧರ್ಮಸ್ಥಳದ ಅಪಪ್ರಚಾರದ ವಿರುದ್ಧ ಆಗಸ್ಟ್ 13ರಂದು ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11:
ಸುಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆದಿರುವ ಅಪಪ್ರಚಾರವನ್ನು ಖಂಡಿಸಿ ಆ. 13ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಶ್ರೀಧರ್ಮಸ್ಥಳ ಭಕ್ತಾಭಿಮಾನಿ ಹಾಗೂ ಲಿಂಬೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಶ್ರೀ ಧರ್ಮಸ್ಥಳದ ಬಗ್ಗೆ ಷಡ್ಯಂತ್ರ ರೂಪಿಸಿ ಸುಕ್ಷೇತ್ರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ನಡೆದಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಆ. 13ರಂದು ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದ ವರೆಗೆ ನೂರಾರು ಭಕ್ತರು ಭಾಗವಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಶ್ರೀ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಸಲ್ಲದು. ಶ್ರೀ ಧರ್ಮಸ್ಥಳಕ್ಕೆ ನೂರಾರು ವರ್ಷಗಳ ಇತಿಹಾಸ ಇದೆ. ಇದಕ್ಕೆ ಕೆಟ್ಟ ಹೆಸರು ತರಲು ಕೆಲವರು ಪಿತೂರಿ ಮಾಡುತ್ತಿದ್ದಾರೆ ಎಂದು ಆಪಾದಿಸಿದರು. ಇಂಥ ಷಡ್ಯಂತ್ರ ಯಶಸ್ವಿಯಾಗಲು ನಾವು ಬಿಡುವುದಿಲ್ಲ ಎಂದರು.
ಗಿರೀಶ ಮಟ್ಟೆಣ್ಣನವರ, ಮಹೇಶ ಶೆಟ್ಟಿ ತಿಮರೊಡಿಸಮೀರ್ ಎಂ.ಡಿ ಸೇರಿದಂತೆ ಹಲವರ ಕೈವಾಡ ಇದೆ ಎಂದು ಆರೋಪಿಸಿದರು.
ಭಕ್ತರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೇಳಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಮುಖಂಡರಾದ ಶೀತಲಕುಮಾರ ಓಗಿ, ಅಪ್ಪುಗೌಡ ಪಾಟೀಲ,ವಿಜಯ ಜೋಶಿ ಸೇರಿದಂತೆ ಅನೇಕರು ಇದ್ದರು.

Share