ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ ಸೆ.18:
ಜಿಲ್ಲಾಡಳಿತದ ಮೂಲಕ ಅ.7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.‌ ಆನಂದ ಕೆ. ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಅ.7ರ ಬೆಳಿಗ್ಗೆ 9-30 ಗಂಟೆಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ವಿವಿಧ ಸತ್ತಿಗೆ ಕುಣಿತ, ಜಗ್ಗಲಿಗೆ ಕುಣಿತ, ಗೊಂಬೆ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ
ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ, ಬೆಳಿಗ್ಗೆ 10-30ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಜಯಂತಿ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ, ವೇದಿಕೆ ಅಲಂಕಾರ, ಜಯಂತಿ ಕಾರ್ಯಕ್ರಮಕ್ಕೆ ಅತಿಥಿಗಳಿಗೆ ಆಹ್ವಾನ, ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಅವರ ವಿಚಾರಧಾರೆಗಳ ಕುರಿತು ಉಪನ್ಯಾಸ, ಎಸ್ಎಸ್ಎಲ್ ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದು ಸೇರಿದಂತೆ ವೇದಿಕೆ ಕಾರ್ಯಕ್ರಮಕ್ಕೆ ಅಗತ್ಯ ರೂಪುರೇಷೆ ಸಿದ್ಧಪಡಿಸಿಕೊಳ್ಳುವುದು ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ವೃತ್ತಗಳಿಗೆ ದೀಪಾಲಂಕಾರ,ಆಸನ ವ್ಯವಸ್ಥೆ,, ವೇದಿಕೆ ಸಿದ್ಧತೆ, ನೃತ್ಯ ರೂಪಕ ಏರ್ಪಡಿಸುವುದೂ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ವಿವಿಧ ಸಮಾಜದ ಮುಖಂಡರು ತಮ್ಮ ಅಗತ್ಯ ಸಲಹೆ ಸೂಚನೆ‌ ನೀಡಿದರು.
ಸಮಾಜ‌ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಅವರು ಎಲ್ಲರನ್ನೂ ಸ್ವಾಗತಿಸಿ, ಕಾರ್ಯಕ್ರಮದ ರೂಪುರೇಷೆ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಡಿವೈಎಸ್ಪಿ ಬಸವರಾಜ ಯಲಿಗಾರ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ್ ಸೌದಾಗರ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಂ.ಎಚ್. ಬಾಂಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪುಂಡಲಿಕ ಮಾನವರ, ಕ್ರೀಡಾಧಿಕಾರಿ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ವಿವಿಧ‌ ಸಮಾಜದ ಮುಖಂಡರಾದ ಮಲ್ಲಿಕಾರ್ಜುನ ಬಟಗಿ, ಮರಳಸಿದ್ಧ ನಾಯ್ಕೋಡಿ, ಸಿದ್ದು ರಾಯಣ್ಣವರ, ಅಶೋಕ ಛಲವಾದಿ, ಮಹಾದೇವ ಕತ್ನಳ್ಳಿ, ಕೃಷ್ಣಾ, ರವಿ ಬಿಸನಾಳ, ಅಮಿತ ನಾಯ್ಕೋಡಿ, ವಿದ್ಯಾವತಿ ಅಂಕಲಗಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿರಿದ್ದರು.

Share