ಸಪ್ತಸಾಗರ ವಾರ್ತೆ, ವಿಜಯಪುರ, ಅ. 21:
ಪ್ರೌಢಶಾಲಾ ಶಿಕ್ಷಕರ ಸಂಘದ ಮೂಲಕ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ವಿಜಯಪುರ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ರಾಜ್ಯದಲ್ಲಿಯೇ ಅತ್ಯಂತ ಕಿರಿಯ ವಯಸ್ಸಿನ ಅಧ್ಯಕ್ಷ ಎಂಬ ಕೀರ್ತಿಗೆ ಪಾತ್ರರಾಗಿರುವ ಶಿವರಾಜ್ ಬಿರಾದಾರ ಅವರಿಗೆ, ಕನ್ನಡ ಸಾಹಿತ್ಯ ಪರಿಷತ್ ವಿಜಯಪುರ ಘಟಕದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರನ್ನಾಗಿ ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ನೇಮಕ ಮಾಡಿದ್ದಾರೆ.
ಶಿವರಾಜ್ ಬಿರಾದಾರ ಅವರು ಪ್ರೌಢಶಾಲಾ ಶಿಕ್ಷಕರ ಸಂಘಟನೆಯ ಜೊತೆಗೆ ಕನ್ನಡಪರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ‘ಸಮಗ್ರ ಕರ್ನಾಟಕ ಇತಿಹಾಸ ಪುಸ್ತಕದ ಲೇಖಕರಾಗಿರುವ ಇವರು ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ಮೆರೆದಿರುವ ಅವರು, ಕಾರ್ಯಕ್ರಮಗಳ ಅರ್ಥಪೂರ್ಣ ನಿರೂಪಣೆಯಲ್ಲಿಯೂ ವಿಶಿಷ್ಟ ಹೆಸರನ್ನು ಗಳಿಸಿದ್ದಾರೆ.
ಅವರು ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಹುದ್ದೆಯನ್ನು ನಿರ್ವಹಿಸುತ್ತಿದ್ದು, ಈಗ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.
ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜ ಸೇವೆಯ ಹಾದಿಯಲ್ಲಿ ಮುಂದುವರಿಯುತ್ತಿರುವ ಶಿವರಾಜ್ ಬಿರಾದಾರರ ಸಾಧನೆಗೆ ಸಹೋದ್ಯೋಗಿಗಳು, ಸಾಹಿತ್ಯ ವಲಯದ ಗಣ್ಯರು ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಶಿವರಾಜ್ ಬಿರಾದಾರರಿಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯಕಾರಿಣಿ ಸದಸ್ಯತ್ವ


