ರಸ್ತೆ ಅಪಘಾತ ತಡೆಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತುಸೂಕ್ತ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ನ.21: ಮಾನವ ಜೀವ ಅತ್ಯಂತ ಅಮೂಲ್ಯವಾದದ್ದು. ಅಪಘಾತದಿಂದಾಗುವ ಜೀವ ಹಾನಿ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮಗಳು ಹಾಗೂ ರಸ್ತೆ ಸುರಕ್ಷತಾ ನಿಯಮಗಳ ತಿಳಿವಳಿಕೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಅಪಘಾತ ತಡೆಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಸೂಕ್ತ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅಪಘಾತ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವುದು ಹಾಗೂ ಪ್ರಯಾಣಿಕರು ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳ ಅರಿವು ಹೊಂದುವುದು ಅತ್ಯವಶ್ಯಕವಾಗಿದೆ. ಅಧಿಕಾರಿಗಳು ಈ ಕುರಿತು ಸಾರ್ವಜನಿಕರಲ್ಲಿ ಸೂಕ್ತ ತಿಳಿವಳಿಕೆ ಮೂಡಿಸಿ, ರಸ್ತೆ ನಿಯಮಗಳ ಪಾಲನೆಯಾಗುವಂತೆ ನೋಡಿಕೊಳ್ಳುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಅಪಘಾತಗಳು ಸಂಭವಿಸುವ ಅಪಘಾತ ವಲಯಗಳನ್ನು ಗುರುತಿಸಿ, ಇಂತಹ ಸ್ಥಳಗಳಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ವಹಿಸಬೇಕು. ಅಪಘಾತ ಸಂಭವಿಸುವ ರಸ್ತೆಗಳಲ್ಲಿ ಸಂಚಾರಿ ಚಿಹ್ನೆ, ಅಗತ್ಯವಿದ್ದಲ್ಲಿ ರಸ್ತೆ ಗುರುತು ಫಲಕ ಅಳವಡಿಸಬೇಕು. ಅವಶ್ಯವಿದ್ದೆಡೆ ಬ್ಯಾರಿಕೇಡ್ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮ ವಹಿಸಿ ರಸ್ತೆ ನಿಯಮಗಳ ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ನಿಗಾ ಇರಿಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯಾದ್ಯಂತ ಅಪಘಾತ ಪ್ರಮಾಣ ತಡೆಗೆ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸುವಂತೆ ಪ್ರಯಾಣಿಕರಿಗೆ ತಿಳಿ ಹೇಳಿ, ಸೂಕ್ತ ಅರಿವು ಮೂಡಿಸಬೇಕು. ರಸ್ತೆ ಅಪಘಾತ ತಡೆಗೆ ಸೂಕ್ತ ಯೋಜನೆ ರೂಪಿಸಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ಸಂಭವಿಸುವ ಅಪಘಾತ ಸ್ಥಳಗಳನ್ನು ಗುರುತಿಸಿ, ಪರಿಶೀಲನೆ ನಡೆಸಿ, ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಮಗ್ರ ಅಧ್ಯಯನ ನಡೆಸಿ ಅಪಘಾತ ತಡೆಗಟ್ಟಲು ಕೈಗೊಳ್ಳಬೇಕಾದ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ವಿಜಯಪುರ ನಗರದ ವ್ಯಾಪ್ತಿಯಲ್ಲಿನ ವಿಜಯಪುರ-ಸಿಂದಗಿ ರಸ್ತೆಯ ಮೇಲೆ ಬರುವ ಅಂಬೇಡ್ಕರ್ ವೃತ್ತದಲ್ಲಿ ಅಪಘಾತ ತಪ್ಪಿಸಲು ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಯಾವುದೇ ಅಪಘಾತ ಸಂಭವಿಸದಂತೆ ಮುನ್ನೆಚ್ಚರಿಕೆಯಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ಕಾರ್ಯ ನಿರ್ವಹಿಸಿ ಯಾವುದೇ ಅಪಘಾತಗಳು ನಡೆಯದಂತೆ ಮುಂಜಾಗ್ರತೆ ವಹಿಸಿ, ಅಗತ್ಯ ಇರುವ ಕಡೆ ಸೈನ್‍ಬೋರ್ಡ್, ರಸ್ತೆ ಸ್ಟಡ್ಸ್‍ಗಳನ್ನ ಅಳವಡಿಸಬೇಕು. ವಿಜಯಪುರ ಮನಗೂಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಮನಗೂಳಿ ಉತ್ನಾಳ ಕ್ರಾಸ್ ಅಪಘಾತ ಸಂಭವಿಸುವ ಕುರಿತು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಕನಕದಾಸ ವೃತ್ತ ಹಾಗೂ ಕ್ರೀಡಾಂಗಣಕ್ಕೆ ಹೊಂದಿಕೊಂಡಿರುವ ರಸ್ತೆಗಳಲ್ಲಿ ಅಪಘಾತ ಸಂಭವಿಸುವುದರಿಂದ ಈ ಕುರಿತು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದರು.
ಮುಂದಿನ ಸಭೆಯೊಳಗಾಗಿ ಪರಿಹಾರಕ್ಕೆ ಕ್ರಮ ವಹಿಸಬೇಕು. ಲೋಕೋಪಯೋಗಿ ಇಲಾಖೆ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಪಾಲಿಕೆ ಅಧಿಕಾರಿಗಳು ಸಂಚಾರ ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ ಪರಿಶೀಲನೆ ನಡೆಸುವಂತೆ ಅವರು ಸೂಚನೆ ನೀಡಿದರು.
ರಸ್ತೆ ಸುರಕ್ಷತಾ ಸಭೆಯ ಮುಖ್ಯ ಉದ್ದೇಶ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳು, ಅಪಘಾತ ಸಂಭವಿಸಲು ಇರುವ ಕಾರಣ, ಪ್ರಾಥಮಿಕ ಮಾಹಿತಿ ಹಾಗೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಮಗ್ರ ಪರಿಶೀಲನೆ ನಡೆಸುವುದಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಿ ಅಪಘಾತ ತಡೆಗೆ ಕಾರ್ಯ ನಿರ್ವಹಿಸುವಂತೆ ಹಾಗೂ ಜಿಲ್ಲೆಯ ಅಗತ್ಯವಿದ್ದೆಡೆ ಸರ್ವೀಸ್ ರಸ್ತೆ ನಿರ್ಮಾಣಕ್ಕಾಗಿ ಅಗತ್ಯವಿರುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಅನುಪಾಲನೆ ಮಾಡುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿ, ಈಗಾಗಲೇ ಕೊಲ್ಹಾರ ಸೇತುವೆ ಮೇಲೆ ವಿದ್ಯುತ್ ವ್ಯವಸ್ಥೆ ಕಲ್ಪಿಸುವ ಕಾರ್ಯ ಮುಗಿದಿದ್ದು, ಒಟ್ಟಾರೆ ನಾಲ್ಕು ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಜಿಲ್ಲಾ ವ್ಯಾಪ್ತಿಯ ಸೋಲಾಪುರ ಮತ್ತು ಬಾಗಲಕೋಟೆ 137 ಕಿ.ಮೀ. ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯ್ದ 12 ಸ್ಥಳಗಳನ್ನು ಗುರುತಿಸಲಾಗಿದ್ದು, ಗುರುತಿಸಲಾದ ಸ್ಥಳಗಳಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಪಾಲನೆಗೆ ಸಿಸಿಟಿವಿ ಕ್ಯಾಮರಾ ಕ್ರಮ ವಹಿಸುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದ ಅವರು, ಇದರಿಂದ ರಸ್ತೆ ಅಪಘಾತ ತಡೆಗೆ ಸಹಕಾರಿಯಾಗಲಿದೆ. ಈ ಕಾರ್ಯವನ್ನು ಆದ್ಯತೆ ಮೇಲೆ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮ ಬಾಬಾ ಮುದ್ದೇಬಿಹಾಳ, ಅಬಕಾರಿ ಉಪ ಆಯುಕ್ತ ಮುರಳೀಧರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್‍ಕುಮಾರ ಗುಣಾರಿ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Share this