ಮಕ್ಕಳ ಸರ್ವಾರ್ಗೀಣ ಅಭಿವೃದ್ದಿಗೆ ಕ್ರಮ ವಹಿಸಲು ಶಶಿಧರ ಕೋಸಂಬೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ ಡಿ.6: ಮಕ್ಕಳ ಸರ್ವಾಂಗಿಣ ವ್ಯಕ್ತಿತ್ವದ ಬೆಳವಣಿಗೆಗಾಗಿ ಶಿಕ್ಷಣ ಇಲಾಖೆಯೊಂದಿಗೆ ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಮಕ್ಕಳಿಗೆ ದೊರಬೇಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಹೇಳಿದರು.
ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕುರಿತ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಭವಿಷ್ಯದಲ್ಲಿ ಯಾವುದೇ ತಾಂತ್ರಿಕ ತೊಂದರೆಯಾಗದಂತೆ ನೋಡಿಕೊಳ್ಳಲು ಹಾಗೂ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಲಾಭ ದೊರಕಿಸುವ ನಿಟ್ಟಿನಲ್ಲಿ ನಿಗದಿತ ಅವಧಿಯಲ್ಲಿ ಮಕ್ಕಳ ದಾಖಲೆಗಳನ್ನು ಸರಿಪಡಿಸಬೇಕು. 1.84 ಲಕ್ಷ ವಿದ್ಯಾರ್ಥಿಗಳ ಆಧಾರ ಇಂದೀಕರಣ ಕಾರ್ಯ 3 ತಿಂಗಳಲ್ಲಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಿಕ್ಷಣ ಇಲಾಖೆ ಪಾತ್ರ ಅತಿ ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ವಿವಿಧ ಇಲಾಖೆಗಳ ಸಹಯೋಗ ಪಡೆದುಕೊಂಡು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳ ಕಾರ್ಯದಲ್ಲಿ ಯಾವುದೇ ವಿಳಂಬ ನೀತಿ ಅನುಸರಿಸದೇ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ ಮಕ್ಕಳಿಗೆ ದೊರಕಬೇಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು. ವಿಳಂಬ ನೀತಿ ಅನುಸರಿಸಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಶಿಫಾರಸ್ಸು ಮಾಡಲಾಗುವುದು ಎಂದು ಅವರು ಹೇಳಿದರು.
ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ನೊಂದಣಿ ಮಾಡಿಕೊಳ್ಳದ ವಿದ್ಯಾರ್ಥಿಗಳ ಪರಿಶೀಲನೆ ನಡೆಸಬೇಕು. ನಿಗದಿತ ಅವಧಿಯಲ್ಲಿ ನೊಂದಣಿ ಮಾಡಿಕೊಳ್ಳುವಂತೆ ಸೂಕ್ತ ಕ್ರಮ ವಹಿಸಬೇಕು. ಶಾಲೆ ಬಿಟ್ಟ ಮಕ್ಕಳ ಮಾಹಿತಿಯನ್ನು ಕ್ರೋಢಿಕರಿಸಿಕೊಂಡು ಅಂತಹ ಮಕ್ಕಳ ಪಾಲಕರ ಮನವೊಲಿಸುವ ಮೂಲಕ ಮಕ್ಕಳನ್ನು ಶಾಲೆಗೆ ಕರೆ ತರಲು ಕ್ರಮ ವಹಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳ ವಿವರನ್ನು ನಿಖರವಾಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಮಾತನಾಡಿ, ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ವಿವಿಧ ಯೋಜನೆ-ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯಗತ ಮಾಡಲಾಗುತ್ತಿದೆ. ಇಚ್ಛಾಶಕ್ತಿಯಿಂದ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ವಿವಿಧ ಸಭೆಗಳನ್ನು ಆಯೋಜಿಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಗುತ್ತಿದೆ. ಕಾಲಕಾಲಕ್ಕೆ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸೂಕ್ತ ಭೋಧನಾ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ದೊರಕಿಸಿ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವೀರಯ್ಯ ಹಿರೇಮಠ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಜಿಲ್ಲೆಯ ಎಲ್ಲ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಸೇರಿದಂತೆ ವಿವಿಧ ತಾಲೂಕಾ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.

ಕ್ಷೇತ್ರ ಭೇಟಿ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ ಕೋಸಂಬೆ ಅವರು ಜಿಲ್ಲೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಶುಕ್ರವಾರ ಭೇಟಿ ನೀಡಿ, ಶಾಲಾ ಸ್ವಚ್ಛತೆ, ಶುಚಿತ್ವ, ಮಕ್ಕಳ ಹಾಜರಾತಿ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಕಲ್ಪಿಸಿರುವ ಪರಿಶೀಲನೆ ನಡೆಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಮೆನುವಿನ ಪ್ರಕಾರ ಆಹಾರ ಒದಗಿಸಬೇಕು. ಗುಣಮಟ್ಟದ ಆಹಾರ ಒದಗಿಸಬೇಕು. ಮಕ್ಕಳಿಗೆ ಸ್ನಾನಕ್ಕೆ ಬಿಸಿನೀರಿನ ವ್ಯವಸ್ಥೆ, ಭದ್ರತಾ ವ್ಯವಸ್ಥೆಗೆ ಸಿಸಿಟಿವಿ ಕ್ಯಾಮರಾ ಅಳವಡಿಸಿರುವ ಕುರಿತು ಪರಿಶೀಲನೆ ನೀಡಿದರು.
ನಗರದ ಗಾಂಧಿವೃತ್ತದಲ್ಲಿರುವ ಪೊಲೀಸ್ ಠಾಣೆಯ ವಿಶೇಷ ಮಕ್ಕಳ ಪೊಲೀಸ್ ಘಟಕಕ್ಕೆ ಭೇಟಿ ನೀಡಿ ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮ ಪರಿಶೀಲನೆ, ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಎಲ್ಲ ಸಮಸ್ಯೆಗಳನ್ನು ತ್ವರಿತವಾಗಿ ಸರಿಪಡಿಸಲು ಕ್ರಮ ವಹಿಸುವಂತೆ ಸೂಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.

Share this