ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 21: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ತಾಲೂಕು ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಡಿ. 24ರಂದು ಬೆಳಗ್ಗೆ 10 ಗಂಟೆಗೆ ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ನಡೆಯಲಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಗೋಪಾಲ ನಾಯಕ ರಚಿಸಿದ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ನುಡಿಮುತ್ತುಗಳು ಕೃತಿಯನ್ನು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಬಿಡುಗಡೆಗೊಳಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಆಗಮಿಸಲಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಶಯ ನುಡಿಗಳನ್ನಾಡಲಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ಸಿ. ಲೋಕೇಶ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.
ಈ ಸಂದರ್ಭದಲ್ಲಿ ಪುಂಡಲೀಕ ಬಾಳೋಜಿ, ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಎಂ.ಎಸ್.ಕರಡಿ, ವಿಡಿಎ ಅಧ್ಯಕ್ಷ ಕನಾನ್ ಅಬ್ದುಲ್ ಹಮೀದ್ ಮುಶ್ರೀಫ ಉಪಸ್ಥಿತರಿರುವರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ. ಆನಂದ ಕೆ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಭಾಗವಹಿಲಿಸದ್ದಾರೆ.
ಈ ಕಾರ್ಯಕ್ರಮದಲ್ಲಿ ಎಲ್ಲ ತಾಲೂಕು ಘಟಕದ ಪದಾಧಿಕಾರಿಗಳು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಯಡಳ್ಳಿ ಹಾಗೂ ಇತರೆ ಪದಾಧಿಕಾರಿಗಳು ಕಾರ್ಯಕಾರಿಣಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ. 24ರಂದು ಕಾನಿಪ ನೂತನ ಪದಾಧಿಕಾರಿಗಳ ಪದಗ್ರಹಣ


