ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21:
ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆ ಮತ್ತು ಬಿರುಗಾಳಿಯಿಂದಾಗಿ ಉಂಟಾಗಿರುವ ಹಾನಿಯ ಕುರಿತು ಸಮಗ್ರ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಬೀಸಿದ ಬಿರುಗಾಳಿ ಮತ್ತು ಸುರಿದ ಆಲಿಕಲ್ಲು ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಬೆಳೆಹಾನಿ ಕುರಿತು ಸಮೀಕ್ಷೆ ನಡೆಸಬೇಕು. ಈ ಸಮೀಕ್ಷೆಯಲ್ಲಿ ಬೆಳೆಹಾನಿಯಾದ ಯಾವುದೇ ರೈತರ ಹೆಸರು ಬಿಟ್ಟು ಹೋಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕೃಷಿ ಮತ್ತು ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಸಮೀಕ್ಷೆ ನಡೆಸಬೇಕು. ಅಲ್ಲದೇ, ಈ ಕುರಿತು ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಸಚಿವರು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಸೂಚನೆ ನೀಡಿದ್ದಾರೆ.
ಇದೇ ವೇಳೆ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರಾಹುಲ್ ದೊಡ್ಡಿಮನಿ ಮತ್ತು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಅವರೊಂದಿಗೂ ಮಾತನಾಡಿರುವ ಸಚಿವರು, ಬೆಳೆ ಹಾನಿ ಕುರಿತು ಸಮಗ್ರ ಮತ್ತು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಆಲಿಕಲ್ಲು ಮಳೆ:ಬೆಳೆ ಹಾನಿ ಸಮೀಕ್ಷೆಗ ಸೂಚನೆ


