ಸಪ್ತಸಾಗರ ವಾರ್ತೆ,ವಿಜಯಪುರ, ಮಾರ್ಚ್ 23: ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿ ಹಾಗೂ ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಸೋಮವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಿನಿ ಸಭಾಂಗಣದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ಜಿಲ್ಲೆಯಾದ್ಯಂತ ನಡೆಯುತ್ತಿರುವ ಪರೀಕ್ಷೆಗಳ ನೇರ ವೀಕ್ಷಣಾ ವ್ಯವಸ್ಥೆಯನ್ನು ಪರಿಶೀಲಿಸಿದರು. ತಾಂತ್ರಿಕ ವ್ಯವಸ್ಥೆಗಳು ದೋಷ ರಹಿತವಾಗಿ ಕಾರ್ಯ ನಿರ್ವಹಿಸುವಂತೆ ನಿರಂತರ ನಿಗಾವಹಿಸಬೇಕು ಎಂದು ಸೂಚಿಸಿದರು.
ಬಳಿಕ ಶಾಮ್ಸ್ ಪ್ರೌಢಶಾಲೆ, ಬಂಜಾರ ಪ್ರೌಢ ಶಾಲೆ ಹಾಗೂ ಚೇತನಾ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು.
ಪರೀಕ್ಷಾ ವ್ಯವಸ್ಥೆಯನ್ನು ವೀಕ್ಷಿಸಿದ ಜಿಪಂ ಸಿಇಒ ರಿಷಿ ಆನಂದ ಅವರು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯುವಂತಾಗಲು ಸೂಕ್ತ ವಾತಾವರಣ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳು, ವೆಬ್ ಕಾಸ್ಟಿಂಗ್ ವ್ಯವಸ್ಥೆ, ಪ್ರಥಮ ಚಿಕಿತ್ಸಾ ಕಿಟ್ ಹಾಗೂ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಸ್ಥಿತಿಗತಿಯನ್ನು ಪರಿಶೀಲಿಸಿ, ಎಲ್ಲವೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಂಡರು.
ಇದೇ ಸಂದರ್ಭದಲ್ಲಿ ಪರೀಕ್ಷಾ ಅವಧಿಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ವಹಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಅನಧಿಕೃತ ವ್ಯಕ್ತಿಗಳ ಸಂಚಾರವನ್ನು ನಿಯಂತ್ರಿಸಬೇಕು ಎಂದರು.
ಪರೀಕ್ಷಾ ಪ್ರಶ್ನೆಪತ್ರಿಕೆಗಳ ಸುರಕ್ಷಿತ ವಿತರಣೆಯ ಬಗ್ಗೆ ವಿಶೇಷ ಗಮನ ಹರಿಸಬೇಕು ಹಾಗೂ ಸಮಯಪಾಲನೆ ಕಟ್ಟುನಿಟ್ಟಾಗಿ ಅನುಸರಿಸಬೇಕು. ಪರೀಕ್ಷಾ ಕರ್ತವ್ಯದಲ್ಲಿರುವ ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ, ಯಾವುದೇ ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಪರೀಕ್ಷಾ ಕರ್ತವ್ಯದಲ್ಲಿರುವ ಸಿಬ್ಬಂದಿಗೆ ಸೂಚನೆ ನೀಡಿ, ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಯಾವುದೇ ಅಡಚಣೆ ಇಲ್ಲದೆ ನಡೆಯಲು ಇಲಾಖೆಯ ಎಲ್ಲ ಅಧಿಕಾರಿಗಳ ಸಮನ್ವಯ ಅತ್ಯವಶ್ಯಕವಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಿಇಒ ತಿಳಿಸಿದರು.
ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಜಿಲ್ಲಾ ನೋಡೆಲ್ ಅಧಿಕಾರಿಗಳಾದ ಟಿ. ಎಸ್. ಕೊಲ್ಹಾರ, ಜಿಲ್ಲೆಯ ಎಲ್ಲಾ ವಲಯಗಳ ಮುಖ್ಯಸ್ಥರು ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ವೀಕ್ಷಕರು, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರ, ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ


