ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ,ಏ.13: ಅಕ್ಷಯ ತೃತೀಯ ಪ್ರಯುಕ್ತ ಏ.20 ರಂದು ಜಿಲ್ಲೆಯಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಹಾಗೂ ವೈಯಕ್ತಿಕ ವಿವಾಹಗಳಲ್ಲಿ ಬಾಲ್ಯ ವಿವಾಹ ಜರುಗಿಸಿದಲ್ಲಿ, ಅದು ಬಾಲ್ಯವಿವಾಹ ನಿಷೇಧ ಕಾಯ್ದೆ-2006ರನ್ವಯ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ಜಿಲ್ಲೆಯ ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಹಾಗೂ ಇತರ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯವಿವಾಹ ನಿಷೇಧ ಎಂಬ ಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಬಾಲ್ಯ ವಿವಾಹವನ್ನು ನಡೆಸುವ, ನಿರ್ದೇಶಿಸುವ ಅಥವಾ ಪ್ರಚೋದಿಸುವ ಯಾವುದೇ ವ್ಯಕ್ತಿ ಕಾನೂನು ಪ್ರಕಾರ ಸಮಾನವಾಗಿ ಹೊಣೆಗಾರರಾಗುತ್ತಾರೆ.
ವಿವಾಹ ಸಮಾರಂಭವನ್ನು ನಡೆಸುವ ಪುರೋಹಿತರು, ಅದನ್ನು ಏರ್ಪಡಿಸುವ ಸಂಬಂಧಿಕರು, ಸುಗಮಗೊಳಿಸುವ ಆಯೋಜಕರು ಸೇರಿದಂತೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲರೂ ಬಾಲ್ಯವಿವಾಹ ನಿಷೇಧ ಕಾಯ್ದೆಯ ಚೌಕಟ್ಟಿನಲ್ಲಿ ಶಿಕ್ಷೆಗೆ ಒಳಗಾಗುತ್ತಾರೆ. ಈ ಸಂಬAಧ ಕ್ರಿಮಿನಲ್ ಪಿಟಿಷನ್ ಸಂಖ್ಯೆ 1605/2026ರಲ್ಲಿ ಗೌರವಾನ್ವಿತ ಉಚ್ಚ ನ್ಯಾಯಾಲಯ, ಬೆಂಗಳೂರು ಸ್ಪಷ್ಟ ಆದೇಶ ಹೊರಡಿಸಿದೆ.
ಜಿಲ್ಲೆಯಾದ್ಯಂತ ವಿವಿಧ ಇಲಾಖೆಗಳಲ್ಲಿನ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ತೀವ್ರ ನಿಗಾ ವಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ದೊರೆತಲ್ಲಿ, ತಕ್ಷಣವೇ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ತುರ್ತು ಸೇವೆ 112, ಹತ್ತಿರದ ಪೊಲೀಸ್ ಠಾಣೆ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this