ಸಪ್ತಸಾಗರ ವಾರ್ತೆ,ವಿಜಯಪುರ, ಏ. 18: 2026ನೇ ಸಾಲಿನ ಸಿಇಟಿ ಪ್ರವೇಶ ಪರೀಕ್ಷೆಗಳು ಏ. 22 ರಿಂದ 24 ರವರೆಗೆ ಜಿಲ್ಲೆಯ 30 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸಿಇಟಿ ಪರೀಕ್ಷೆಗೆ ಸಂಬಂಧಿಸಿದ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯಲಿದ್ದು, ಜಿಲ್ಲೆಯ ಒಟ್ಟು 30 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು,13,359 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಮುಂಜಾಗ್ರತೆಯಿಂದ ಪರೀಕ್ಷಾ ನಿಯಮಗಳನ್ವಯ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ವೀಕ್ಷಕರಂತೆ ಒಟ್ಟು 30 ವೀಕ್ಷಕರನ್ನು ನೇಮಿಸಿದೆ. ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲಾದ ವೀಕ್ಷಕರು ಪರೀಕ್ಷೆ ಪ್ರಾರಂಭವಾಗುವ ಸಮಯಕ್ಕಿಂತ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಉಪ ಮುಖ್ಯ ಅಧಿಕ್ಷಕರು,ಓರ್ವ ಪ್ರಶ್ನೆಪತ್ರಿಕೆ ಪಾಲಕರು ಹಾಗೂ ಓರ್ವ ವಿಶೇಷ ಸ್ಥಾನಿಕ ಜಾಗೃತದಳ ಸದಸ್ಯರನ್ನು ನೇಮಿಸಿದೆ. ಪರೀಕ್ಷಾ ನಡೆಯುವ ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಆದೇಶಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಹೊಸಮನಿ, ಉಪ ಅಧೀಕ್ಷಕರು, ಮಾರ್ಗಾಧಿಕಾರಿಗಳು, ವೀಕ್ಷಕರು ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.
ಸುಸೂತ್ರ ಪರೀಕ್ಷೆ ನಡೆಸಲು ಎಡಿಸಿ ಸೂಚನೆ


