ಸಪ್ತಸಾಗರ ವಾರ್ತೆ ವಿಜಯಪುರ, ಮೇ. 3:
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪ್ರದಾನ ಪ್ರಕ್ರಿಯೆಯಲ್ಲಿ ನಡೆದಿರುವ ನಿಯಮ ಉಲ್ಲಂಘನೆಗಳು ಮತ್ತು ಅಕ್ರಮಗಳ ಕುರಿತು ತನಿಖೆ ನಡೆಸಲು ಮೇ 4 ಪರಿಶೀಲನಾ ತಂಡವು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಅಕ್ಷಯಕುಮಾರ್ ಅಜಮನಿ ತಿಳಿಸಿದ್ದಾರೆ.
ವಿಶ್ವವಿದ್ಯಾಲಯದಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ದ್ರಾವಿಡ ವಿದ್ಯಾರ್ಥಿ ಪರಿಷತ್ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಕಳೆದ ತಿಂಗಳು ರಾಜ್ಯಪಾಲರ ಭೇಟಿ ಸಂದರ್ಭದಲ್ಲಿ ಮನವಿ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ನಿರಾಕರಿಸಿದ್ದಕ್ಕೆ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮತ್ತು ಪೋಷಕರ ಪರವಾಗಿ ರಾಜ್ಯಮಟ್ಟದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗಿತ್ತು.
ಈ ಹೋರಾಟದ ಪರಿಣಾಮವಾಗಿ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಂಡಿದ್ದು, ಪ್ರಕರಣದ ಸತ್ಯಾಸತ್ಯತೆ ಪರಿಶೀಲನೆಗಾಗಿ ತನಿಖಾ ತಂಡವನ್ನು ಕಳುಹಿಸಲಾಗಿದೆ.
ತಂಡವು ವಿಶ್ವವಿದ್ಯಾಲಯದ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ,ಅನ್ಯಾಯಕ್ಕೊಳಗಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲಿದೆ ಎಂಬ ವಿಶ್ವಾಸವನ್ನು ಅಕ್ಷಯ್ ಕುಮಾರ್ ಅಜಮನಿ ವ್ಯಕ್ತಪಡಿಸಿದ್ದಾರೆ.
ಅಕ್ರಮಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವವರೆಗೆ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೆ ದ್ರಾವಿಡ ವಿದ್ಯಾರ್ಥಿ ಪರಿಷತ್ ತನ್ನ ಹೋರಾಟವನ್ನು ಮುಂದುವರಿಸುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಮನವಿ:
ಪಿಎಚ್.ಡಿ ಪ್ರಕ್ರಿಯೆಯಲ್ಲಿ ಅನ್ಯಾಯಕ್ಕೊಳಗಾದ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಂಶೋಧಕರು ನಾಳೆ ವಿಶ್ವವಿದ್ಯಾಲಯಕ್ಕೆ ಆಗಮಿಸಿ, ತನಿಖಾ ತಂಡವನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳು ಮತ್ತು ಮನವಿಗಳನ್ನು ನೇರವಾಗಿ ಸಲ್ಲಿಸಬೇಕು ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ಮನವಿ ಮಾಡಿದೆ.


