ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 7:
ಗೃಹಬಳಕೆ ಗ್ಯಾಸ್ ಸಿಲಿಂಡರ್ ದರ ಏರಿಕೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ನಗರಾಭಿವೃದ್ಧಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ವಿಜಯಪುರ ಜಿಲ್ಲೆಗೆ ಆಗಮಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿ ಯಾವಾಗಲೂ ಜನವಿರೋಧಿ ನೀತಿಯನ್ನು ಅನುಸರಿಸುತ್ತ ಬಂದಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದಾಗಲೂ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಕಡಿಮೆ ಮಾಡಲಿಲ್ಲ. ಇದೀಗ ಕಚ್ಚಾ ತೈಲದ ಬೆಲೆ ಏರಿಕೆಯಾಗಿದೆ ಎಂಬ ಕಾರಣ ನೀಡಿ ಗ್ಯಾಸ್ ಸೇರಿದಂತೆ ಇಂಧನಗಳ ಬೆಲೆ ಹೆಚ್ಚಿಸಲಾಗಿದೆ ಎಂದು ಆರೋಪಿಸಿದರು.
ಬೆಲೆ ಇಳಿಕೆಯಾಗಿದ್ದ ಸಂದರ್ಭದಲ್ಲಿ ಜನರಿಗೆ ಅದರ ಲಾಭವನ್ನು ನೀಡಿದ್ದರೆ ಈಗಿನ ಹೊರೆ ಇಷ್ಟಾಗುತ್ತಿರಲಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಜನರ ಮೇಲೆ ಹೊರೆ ಬೀಳದಂತೆ ಬಾಂಡ್‌ಗಳನ್ನು ಖರೀದಿಸಿ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದೆವು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯೇ ಇಲ್ಲ. ಬೆಲೆ ಏರಿಕೆಯಿಂದ ಜನರ ಬದುಕಿನ ಮೇಲೆ ಹಾಗೂ ಆರ್ಥಿಕತೆಯ ಮೇಲೆ ದುಷ್ಪರಿಣಾಮ ಬೀಳಲಿದೆ ಎಂದು ಹೇಳಿದರು.
ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ನಡೆಸುವ ಹಕ್ಕಿದೆ. ಅವರು ಒಳ್ಳೆಯ ಉದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದರೆ ಅದನ್ನು ನಡೆಸಲಿ ಎಂದರು.
ಇದೇ ವೇಳೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸಚಿವ ಸತೀಶ್ ಜಾರಕಿಹೊಳಿ ಅವರು 45 ಶಾಸಕರ ಸಹಿ ಸಂಗ್ರಹಿಸಿದ್ದಾರೆ ಎಂಬ ಸುದ್ದಿಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದೆಲ್ಲವೂ ಊಹಾಪೋಹ ಮತ್ತು ಸುಳ್ಳು ಸುದ್ದಿ ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ: ಯತೀಂದ್ರ ವಾಗ್ದಾಳಿ
Screenshot

