ಸರ್ವರ್ ಸಮಸ್ಯೆ ಬಗೆಹರಿಸಿ –ಅಪ್ಪುರಾಜ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 15:
ಸರ್ವರ್ ಸಮಸ್ಯೆ ಬಗೆಹರಿಸಿ ಜನರಿಗೆ ಸಕಾಲಕ್ಕೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಒದಗಿಸಬೇಕು ಎಂದು ಭೀಮ ರಾಜ್ಯ ದಲಿತ್ ಸೇವಾ ಸಮೀತಿ (ರಿ) ರಾಜ್ಯಾಧ್ಯಕ್ಷ ಅಪ್ಪುರಾಜ ನಿಮಾದಾರ ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರು ಮುಂಜಾನೆ 8 ಗಂಟೆಯಿಂದಲೇ ತಹಸೀಲ್ದಾರ್ ಕಚೇರಿ ಮುಂದೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸರ್ವರ್ ಸಮಸ್ಯೆಯಿಂದ ಜನರು ದಿನವಿಡೀ ಕಾಯುವಂತಾಗಿದ್ದು, ವಿದ್ಯಾರ್ಥಿಗಳು, ರೈತರು ಹಾಗೂ ಸಾಮಾನ್ಯ ನಾಗರಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
ಪ್ರಸ್ತುತ ಸರ್ಕಾರ ಪಡಿತರ ಚೀಟಿಗೆ ಜಾತಿ ಪ್ರಮಾಣ ಪತ್ರ ಲಿಂಕ್ ಮಾಡುವಂತೆ ಆದೇಶ ಹೊರಡಿಸಿರುವುದರಿಂದ ಹಾಗೂ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಅಗತ್ಯ ಹೆಚ್ಚಾಗಿದೆ. ಆದರೆ ಸರ್ವರ್ ಸಮಸ್ಯೆಯಿಂದ ಜನರು ಸಮಯ ಮತ್ತು ಹಣ ವ್ಯರ್ಥ ಮಾಡಿಕೊಳ್ಳುವಂತಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಕೂಡಲೇ ಸರ್ವರ್ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಿ, ಸಾರ್ವಜನಿಕರಿಗೆ ಸರಳ ಮತ್ತು ಸುಗಮವಾಗಿ ಜಾತಿ ಹಾಗೂ ಆದಾಯ ಪ್ರಮಾಣ ಪತ್ರಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಬೇಕು. ಒಂದು ವೇಳೆ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸದಿದ್ದಲ್ಲಿ, ಭೀಮ ರಾಜ್ಯ ದಲಿತ್ ಸೇವಾ ಸಮೀತಿ (ರಿ) ವತಿಯಿಂದ ರಾಜ್ಯಾದ್ಯಂತ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Share this