ಯೋಗದಿಂದ ದೇಹ-ಮನಸ್ಸಿನ ಸಮತೋಲನ ಸಾಧ್ಯ: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ.

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:
ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸು ಒಗ್ಗೂಡಿ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಆರ್.ಕೆ.ಎಮ್. ಸಮೂಹ ಸಂಸ್ಥೆಗಳು ಹಾಗೂ ಜಿಲ್ಲಾ ನ್ಯಾಯಾಂಗ ಇಲಾಖೆ ನೌಕರರ ಸಂಘದ ಸಹಯೋಗದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ವರ್ಷದ ಯೋಗ ದಿನಾಚರಣೆಯನ್ನು “ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದಡಿ ಆಚರಿಸಲಾಗುತ್ತಿದೆ. ಯೋಗವನ್ನು ನಿತ್ಯ ಜೀವನದ ಭಾಗವನ್ನಾಗಿಸಿಕೊಂಡರೆ ವಿವಿಧ ರೋಗಗಳನ್ನು ತಡೆಗಟ್ಟಬಹುದಾಗಿದ್ದು, ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ. ಬಿರಾದಾರ ಮಾತನಾಡಿ, ಪ್ರತಿದಿನ ಯೋಗಾಭ್ಯಾಸ ಮಾಡುವ ಮೂಲಕ ಆರೋಗ್ಯವಂತ ಜೀವನ ನಡೆಸಬಹುದು ಎಂದು ತಿಳಿಸಿದರು.
ಆರ್.ಕೆ.ಎಮ್. ಸಮೂಹ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಮಾತನಾಡಿ, ಸಂಸ್ಥೆಯ ವತಿಯಿಂದ ಆರೋಗ್ಯ ತಪಾಸಣೆಗೆ ಸಂಬಂಧಿಸಿದಂತೆ ರಿಯಾಯಿತಿ ದರದಲ್ಲಿ ಹಾಗೂ ಕೆಲವು ಸೇವೆಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯೋಗ ತರಬೇತುದಾರರಾದ ರಮೇಶ ದಿನ್ನಿ, ಸಾವಿತ್ರಿ ಪಿ. ಜಲಗಾರ ಹಾಗೂ ಶ್ರೀಕಾಂತ ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು, ಹಿರಿಯ ಮತ್ತು ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು, ನ್ಯಾಯವಾದಿಗಳು, ನ್ಯಾಯಾಲಯದ ಸಿಬ್ಬಂದಿ ಹಾಗೂ ಆರ್.ಕೆ.ಎಮ್. ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಭಾಗವಹಿಸಿ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿದರು.

Share this