ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 30:
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್–Special Intensive Revision) ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿ, ವಿಜಯಪುರದಲ್ಲಿ ವಿವಿಧ ಸಾಮಾಜಿಕ, ಪ್ರಗತಿಪರ ಹಾಗೂ ನಾಗರಿಕ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಮನವಿಯಲ್ಲಿ, ಚುನಾವಣಾ ಆಯೋಗ ಜಾರಿಗೊಳಿಸಿರುವ ಎಸ್‌ಐಆರ್ ಪ್ರಕ್ರಿಯೆಯಿಂದ ಕೋಟ್ಯಂತರ ಮತದಾರರ ಮತದಾನದ ಹಕ್ಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ವಿಶೇಷವಾಗಿ ಬಡವರು, ಗ್ರಾಮೀಣ ಪ್ರದೇಶದ ಜನರು, ವಲಸೆ ಕಾರ್ಮಿಕರು, ಹಿರಿಯ ನಾಗರಿಕರು, ಮಹಿಳೆಯರು, ದಲಿತರು, ಆದಿವಾಸಿಗಳು ಹಾಗೂ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಅಗತ್ಯ ದಾಖಲೆಗಳನ್ನು ಅಲ್ಪಾವಧಿಯಲ್ಲಿ ಒದಗಿಸುವುದು ಕಷ್ಟಕರವಾಗಿದ್ದು, ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಕೈಬಿಡುವ ಅಪಾಯವಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ, ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಆಡಳಿತಾತ್ಮಕ ಪ್ರಕ್ರಿಯೆಗಳ ಹೆಸರಿನಲ್ಲಿ ಯಾರೊಬ್ಬರ ಮತದಾನದ ಹಕ್ಕಿಗೂ ಧಕ್ಕೆಯಾಗಬಾರದು. ಎಸ್‌ಐಆರ್ ಪ್ರಕ್ರಿಯೆಯನ್ನು ಮರುಪರಿಶೀಲಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕವೇ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಡಿಎಸ್ಎಸ್ ಜಿಲ್ಲಾ ಸಂಚಾಲಕ ಚನ್ನು ಕಟ್ಟಿಮನಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾರರ ಹಕ್ಕು ಅತ್ಯಂತ ಮಹತ್ವದ್ದಾಗಿದ್ದು, ದಾಖಲೆಗಳ ಕೊರತೆಯಿಂದ ಯಾವುದೇ ಅರ್ಹ ನಾಗರಿಕರಿಗೆ ಅನ್ಯಾಯವಾಗದಂತೆ ಸರ್ಕಾರ ಹಾಗೂ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸ್ಲಂ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಕ್ರಂ ಮಾಶಾಳಕರ ಮಾತನಾಡಿ, ನಗರದ ಬಡವರು, ಸ್ಲಂ ನಿವಾಸಿಗಳು ಹಾಗೂ ದುರ್ಬಲ ವರ್ಗದ ಜನರಿಗೆ ಈ ಪ್ರಕ್ರಿಯೆಯಿಂದ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.
ಮನವಿಯನ್ನು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಸ್ವೀಕರಿಸಿ ಸಂಬಂಧಿತ ಅಧಿಕಾರಿಗಳಿಗೆ ರವಾನಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಯು.ಎಚ್. ಖದೀರ್, ಅನಿಲ್ ಹೊಸಮನಿ, ಫಯಾಜ್ ಕಲಾದಗಿ, ಸುರೇಶ್ ಬಿಜಾಪುರ, ಡಾ. ಗುರಿಕಾರ, ಆಮ್ ಆದ್ಮಿ ಪಕ್ಷದ ಜಿಲ್ಲಾ ಅಧ್ಯಕ್ಷ ಭೋಗೇಶ್ ಸೊಲ್ಲಾಪುರ, ವಿದ್ಯಾವತಿ ಅಂಕಲಗಿ, ರಾವುತ ತಳಕೆರಿ, “ಎದ್ದೇಳು ಕರ್ನಾಟಕ” ಸಂಘಟನೆಯ ಪದಾಧಿಕಾರಿಗಳು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
SIR ವಿರುದ್ಧ ವಿವಿಧ ಸಂಘಟನೆಗಳ ಆಕ್ಷೇಪ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ


