ಪಂಜಾಬ್ ಮಾದರಿಯ ರೈತಪರ ಆಡಳಿತ ಜಾರಿಗೆ ಆಗ್ರಹ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 3: ರಾಜ್ಯ ಸರ್ಕಾರದ ಇತ್ತೀಚಿನ ಕ್ಯಾಬಿನೆಟ್ ನಿರ್ಧಾರ ರೈತರಿಗೆ ಅನ್ಯಾಯವಾಗಿದ್ದು, “ಬೆಳೆ ಬೆಳೆಯಬೇಡಿ, ಪರಿಹಾರ ಕೇಳಬೇಡಿ” ಎನ್ನುವ ಧೋರಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಳೆ ಕೊರತೆ, ಅತಿವೃಷ್ಟಿ, ಬೆಳೆಗಳಿಗೆ ಸಮರ್ಪಕ ಬೆಲೆ ಸಿಗದಿರುವುದು, ಉತ್ಪಾದನಾ ವೆಚ್ಚ ಹೆಚ್ಚಳ, ಸಾಲದ ಹೊರೆ ಸೇರಿದಂತೆ ಹಲವು ಸಮಸ್ಯೆಗಳಿಂದ ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸರ್ಕಾರವೇ ಪರಿಹಾರ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿರುವುದು ಖಂಡನೀಯ ಎಂದು ಹೇಳಿದರು.
ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟವಾದಾಗ ರೈತರಿಗೆ ನೆರವಾಗುವುದು ಸರ್ಕಾರದ ನೈತಿಕ ಹಾಗೂ ಸಂವಿಧಾನಬದ್ಧ ಹೊಣೆಗಾರಿಕೆಯಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡುವ ಹೊಣೆಗಾರಿಕೆಯಿಂದಲೇ ಹಿಂದೆ ಸರಿಯುತ್ತಿರುವುದು ರೈತರಿಗೆ ಮಾಡಿದ ದ್ರೋಹ ಎಂದು ಆರೋಪಿಸಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ರೈತರ ಪರ ಆಡಳಿತದ ಭರವಸೆ ನೀಡಿದ್ದ ಕಾಂಗ್ರೆಸ್, ಅಧಿಕಾರಕ್ಕೆ ಬಂದ ಬಳಿಕ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ರೈತ ವಿರೋಧಿ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ ಎಂದು ಟೀಕಿಸಿದರು.
ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರ ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಿ ಕನಿಷ್ಠ ಬೆಂಬಲ ಬೆಲೆಯಡಿ ತ್ವರಿತ ಪಾವತಿ, ಉಚಿತ ವಿದ್ಯುತ್, ನೀರಾವರಿ ವ್ಯವಸ್ಥೆ ಸುಧಾರಣೆ, ಬೆಳೆ ವೈವಿಧ್ಯೀಕರಣ, ರೈತರಿಗೆ ತಾಂತ್ರಿಕ ತರಬೇತಿ ಹಾಗೂ ಕೃಷಿ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಸರ್ಕಾರವೂ ಪಂಜಾಬ್ ಮಾದರಿಯ ರೈತಪರ ನೀತಿಗಳನ್ನು ಅನುಸರಿಸಿ ರೈತರ ಹಿತಾಸಕ್ತಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷವು ಸರ್ಕಾರಕ್ಕೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ರೈತ ವಿರೋಧಿ ಕ್ಯಾಬಿನೆಟ್ ನಿರ್ಧಾರವನ್ನು ತಕ್ಷಣ ಹಿಂಪಡೆಯುವುದು, ಬೆಳೆ ವಿಮೆ ಪಡೆದಿರಲಿ ಅಥವಾ ಪಡೆಯದಿರಲಿ ಎಲ್ಲಾ ಬೆಳೆ ಹಾನಿಗೊಳಗಾದ ರೈತರಿಗೆ ಸಮರ್ಪಕ ಪರಿಹಾರ ನೀಡುವುದು, ಬರ ಹಾಗೂ ಪ್ರಕೃತಿ ವಿಕೋಪದಿಂದ ಸಂಕಷ್ಟದಲ್ಲಿರುವ ರೈತರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವುದು, ಕೃಷಿ ಸಾಲ ಮರುಪಾವತಿಗೆ ಕಾಲಾವಕಾಶ ಹಾಗೂ ಬಡ್ಡಿ ವಿನಾಯಿತಿ ನೀಡುವುದು, ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಹಾಗೂ ರೈತ ಸ್ನೇಹಿ ನೀತಿಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿದೆ.
ಸರ್ಕಾರ ತನ್ನ ನಿಲುವು ಬದಲಿಸದಿದ್ದರೆ ರಾಜ್ಯದ ರೈತರೊಂದಿಗೆ ಸೇರಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಸೋಲಾಪುರ ಎಚ್ಚರಿಕೆ ನೀಡಿದ್ದಾರೆ.


