ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಜಿಲ್ಲೆಯಾದ್ಯಂತ ಮಳೆಯ ಅಭಾವದಿಂದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು ಎಂದು ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಕೃಷಿಗೆ ಅವಲಂಬಿತರಾಗಿರುವ ಸಾವಿರಾರು ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಯಾವುದೇ ವಿಳಂಬ ಮಾಡದೆ ರೈತರ ಪರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶಿವರಾಜ್ ಕೆಂಗನಾಳ ಮಾತನಾಡಿ, ವಿಜಯಪುರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ರೈತರ ಬ್ಯಾಂಕ್ ಹಾಗೂ ವಿವಿಧ ಇಲಾಖೆಗಳಲ್ಲಿರುವ ಸಂಪೂರ್ಣ ಕೃಷಿ ಸಾಲವನ್ನು ಮನ್ನಾ ಮಾಡಬೇಕು.
ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ತಕ್ಷಣವೇ ಸೂಕ್ತ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು. ರೈತರಿಗೆ ಅಗತ್ಯ ಆರ್ಥಿಕ ನೆರವು ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
“ರೈತ ದೇಶದ ಬೆನ್ನೆಲುಬು. ಆದರೆ ಇಂದು ಅನ್ನದಾತನೇ ಸಂಕಷ್ಟದಲ್ಲಿ ಬದುಕುವಂತಾಗಿದೆ. ಸರ್ಕಾರ ಕೇವಲ ಭರವಸೆ ನೀಡುವುದನ್ನು ಬಿಟ್ಟು ತಕ್ಷಣ ರೈತರ ನೆರವಿಗೆ ಧಾವಿಸಬೇಕು. ಬೇಡಿಕೆಗಳನ್ನು ಈಡೇರಿಸದಿದ್ದರೆ ರೈತರ ಹಿತಕ್ಕಾಗಿ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ,” ಎಂದು ಎಚ್ಚರಿಸಿದರು.
ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ಶಿವರಾಜ್ ಕೆಂಗನಾಳ್ ಆಗ್ರಹ


