ಸಪ್ತಸಾಗರ ವಾರ್ತೆ,ವಿಜಯಪುರ, ಜು.24:
ಯುವಕರ ನ್ಯಾಯಯುತ ಹೋರಾಟವನ್ನು ಗೌರವಿಸಿ, ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ನೈತಿಕ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಯುವಕರ ನ್ಯಾಯಯುತ ಬೇಡಿಕೆಗಳನ್ನು ಹತ್ತಿಕ್ಕುವ ಯಾವುದೇ ಪ್ರಜಾಪ್ರಭುತ್ವ ವಿರೋಧಿ ನಿಲುವು ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಧಕ್ಕೆಯಾಗಿದ್ದು, ಇಂತಹ ನಡೆ ಅಪಾಯಕಾರಿ ಹಾಗೂ ಆತ್ಮಹತ್ಯಾತ್ಮಕ ಬೆಳವಣಿಗೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಅನ್ಯಾಯದ ವಿರುದ್ಧ ಪ್ರತಿಭಟಿಸುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಸಂವಿಧಾನಬದ್ಧ ಹಕ್ಕು. ನೀಟ್ ಪರೀಕ್ಷೆಯಲ್ಲಿನ ಅವ್ಯವಸ್ಥೆಯಿಂದ ಅನೇಕ ಪ್ರತಿಭಾವಂತ ಯುವಕ-ಯುವತಿಯರು ಜೀವ ಕಳೆದುಕೊಂಡಿರುವುದು ಅತ್ಯಂತ ದುಃಖಕರ. ಈ ಬೆಳವಣಿಗೆಗೆ ಕೇಂದ್ರ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ನೀಟ್ ಪರೀಕ್ಷೆ ಹಾಗೂ ಅದರ ನಿರ್ವಹಣೆ ಕುರಿತಾಗಿ ದೇಶಾದ್ಯಂತ ಪ್ರತಿಭಟನೆಗಳು ಮತ್ತು ರಾಜಕೀಯ ಚರ್ಚೆಗಳು ತೀವ್ರಗೊಂಡಿವೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ವಿಚಾರದಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ದೇಶದ ಯುವಕರ ಭವಿಷ್ಯದೊಂದಿಗೆ ನಡೆದಿರುವ ಬೆಳವಣಿಗೆ ಕುರಿತು ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನೀಟ್ ಪರೀಕ್ಷೆಗೆ ಸಂಬಂಧಿಸಿದ ಅವಾಂತರಗಳಿಂದ ಜೀವ ಕಳೆದುಕೊಂಡ ವಿದ್ಯಾರ್ಥಿಗಳ ಪ್ರಕರಣಗಳಲ್ಲಿ ಹೊಣೆಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ತಪ್ಪಿತಸ್ಥರನ್ನು ಬಂಧಿಸಿ ದೇಶದ ಯುವಕರಿಗೆ ನ್ಯಾಯ ಒದಗಿಸಬೇಕು ಎಂದು ಸಂಗಮೇಶ ಬಬಲೇಶ್ವರ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಯುವಕರ ನ್ಯಾಯಯುತ ಹೋರಾಟವನ್ನು ಗೌರವಿಸಿ: ಸಂಗಮೇಶ ಬಬಲೇಶ್ವರ


