ಜಿಲ್ಲೆಯ ಸಮಗ್ರ ನೀರಾವರಿಗೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

ಸಿಎಂಗೆ ಮನವಿ ಸಲ್ಲಿಕೆ – ಬಾಕಿ ನೀರಾವರಿ ಯೋಜನೆಗಳನ್ನು ತ್ವರಿತ ಪೂರ್ಣಗೊಳಿಸಲು ಒತ್ತಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:
ಜಿಲ್ಲೆಯ ಸಮಗ್ರ ನೀರಾವರಿ ಅಭಿವೃದ್ಧಿಗೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಕರ್ನಾಟಕ ಉತ್ತರ ಪ್ರಾಂತ ಹಾಗೂ ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಶ್ರೀ ಸಿದ್ಧರಾಮೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು.
ಬಳಿಕ ರೈತರು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಿ, ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷ ಭೀಮಸೇನ ಕೊಕರೆ, ಜಿಲ್ಲೆಯ ಹಲವು ನೀರಾವರಿ ಯೋಜನೆಗಳು ಅಪೂರ್ಣವಾಗಿದ್ದು, ಅವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ರೈತರಿಗೆ ನೀರು ಒದಗಿಸಬೇಕು ಎಂದು ಆಗ್ರಹಿಸಿದರು.
ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ (ಹಂತ-2), ಕೆರೆ ತುಂಬಿಸುವ ಯೋಜನೆಗಳು, ಭುಯ್ಯಾರ್ ಸಂಪರ್ಕ, ಚಿಮ್ಮಲಗಿ ಹಾಗೂ ಚಡಚಣ ಏತ ನೀರಾವರಿ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು. ಹಾಳಾಗಿರುವ ಪೈಪ್‌ಲೈನ್‌ಗಳನ್ನು ದುರಸ್ತಿಗೊಳಿಸಿ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಇಂಡಿ ಬ್ರಾಂಚ್ ಕಾಲುವೆ ಆಧುನೀಕರಣ, ಗುತ್ತಿಬಸವಣ್ಣ ಏತ ನೀರಾವರಿ ಯೋಜನೆ, ಕೆರೆಗಳಿಗೆ ನೀರು ಹರಿಸುವ ಕಾಮಗಾರಿ, ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ನೀರಾವರಿ ಯೋಜನೆಗಳ ನಿರ್ವಹಣೆಗೆ ಅಗತ್ಯ ಎಂಜಿನಿಯರ್‌ಗಳ ನೇಮಕ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು.
ಪ್ರತಿಭಟನೆಗೆ ವಿವಿಧ ಮಠಗಳ ಶ್ರೀಗಳು ಬೆಂಬಲ ವ್ಯಕ್ತಪಡಿಸಿದರು.
ಜಿಲ್ಲಾ ಅಧ್ಯಕ್ಷ ರವೀಂದ್ರನಾಥ ಮೇಡೇಗಾರ, ಗುರುನಾಥ ಬಗಲಿ, ಚನ್ನಪ್ಪ ಮಿರಗಿ, ಬಸವರಾಜ ಕುಂಬಾರ, ಶಾಂತಗೌಡ ಬಿರಾದಾರ, ಅರುಣಗೌಡ ತೇರದಾಳ, ಈರಣ್ಣ ಗೋತ್ಯಾಳ ಸೇರಿದಂತೆ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ರೈತರು ಭಾಗವಹಿಸಿದ್ದರು.

Share this