ಸೆ.10ರಿಂದ ವಿಜಯಪುರದಲ್ಲಿ ಅಗ್ನಿವೀರ ನೇಮಕಾತಿ ರ‍್ಯಾಲಿ : ಸುಗಮ ಹಾಗೂ ಪಾರದರ್ಶಕ ನಿರ್ವಹಣೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.12:
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 10ರಿಂದ 23ರವರೆಗೆ ಭಾರತೀಯ ಸೇನೆಯ ಅಗ್ನಿವೀರ ನೇಮಕಾತಿ ರ‍್ಯಾಲಿ ನಡೆಯಲಿದ್ದು, ರ‍್ಯಾಲಿಯನ್ನು ಶಿಸ್ತುಬದ್ಧ, ಸುಗಮ ಹಾಗೂ ಪಾರದರ್ಶಕವಾಗಿ ನಡೆಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಪೂರ್ಣ ಪ್ರಮಾಣದ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳೂರಿನ ಸೇನಾ ನೇಮಕಾತಿ ಕಚೇರಿ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರ‍್ಯಾಲಿಯು ಪ್ರತಿದಿನ ಬೆಳಗಿನ ಜಾವ 3 ಗಂಟೆಯಿಂದ ಆರಂಭವಾಗಲಿದ್ದು, ಕ್ರೀಡಾಂಗಣದ ಸಿಂಥೆಟಿಕ್ ಟ್ರ್ಯಾಕ್, ಒಳಾಂಗಣ ಬ್ಯಾಡ್ಮಿಂಟನ್ ಹಾಗೂ ಬಾಸ್ಕೆಟ್‌ಬಾಲ್ ಕೋರ್ಟ್‌ಗಳಲ್ಲಿ ದೈಹಿಕ ಪರೀಕ್ಷೆ, ವೈದ್ಯಕೀಯ ತಪಾಸಣೆ ಮತ್ತು ದಾಖಲೆಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳ ಅನುಕೂಲಕ್ಕಾಗಿ ಬಸ್ ಹಾಗೂ ರೈಲ್ವೆ ನಿಲ್ದಾಣಗಳಿಂದ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಕ್ರೀಡಾಂಗಣದಲ್ಲಿ ಜಲನಿರೋಧಕ ಟೆಂಟ್‌ಗಳು, ಕುರ್ಚಿ-ಟೇಬಲ್, ಕುಡಿಯುವ ನೀರು ಹಾಗೂ ಬಯೋ ಟಾಯ್ಲೆಟ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ರ‍್ಯಾಲಿಗೆ ಆಗಮಿಸುವ ಅಭ್ಯರ್ಥಿಗಳು, ಸೇನಾಧಿಕಾರಿಗಳು ಹಾಗೂ ಸಿಬ್ಬಂದಿಗೆ ಆಹಾರ ಮತ್ತು ವಸತಿ ವ್ಯವಸ್ಥೆ ಕಲ್ಪಿಸುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಸೂಚಿಸಲಾಯಿತು.
ದಾಖಲೆಗಳ ತ್ವರಿತ ಪರಿಶೀಲನೆಗಾಗಿ ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಕಂದಾಯ, ಕ್ರೀಡೆ ಹಾಗೂ ಶಿಕ್ಷಣ ಇಲಾಖೆಗಳ ವಿಶೇಷ ತಂಡಗಳನ್ನು ನಿಯೋಜಿಸಲಾಗಿದ್ದು, ಸ್ಥಳದಲ್ಲಿಯೇ ಪರಿಶೀಲನೆ ನಡೆಸಲು ಅಗತ್ಯ ಸಿಬ್ಬಂದಿ ನಿಯೋಜಿಸುವಂತೆ ತಿಳಿಸಿದರು.
ಅಭ್ಯರ್ಥಿಗಳು ಹಾಗೂ ಅವರ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸೂಕ್ತ ಪಾರ್ಕಿಂಗ್ ಮತ್ತು ಬ್ಯಾರಿಕೇಡ್ ವ್ಯವಸ್ಥೆ ಕಲ್ಪಿಸಲಾಗುವುದು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಹಾಗೂ ಸಿಸಿಟಿವಿ ಕಣ್ಗಾವಲು ಇರಲಿದೆ.
ವಿದ್ಯುತ್, ಇಂಟರ್‌ನೆಟ್, ಅಂಬುಲೆನ್ಸ್, ಅಗ್ನಿಶಾಮಕ ಸೇವೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿರುವಂತೆ ಅಧಿಕಾರಿಗಳು ಖಾತರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಎಲ್ಲ ಅಧಿಕಾರಿಗಳು ಕರ್ತವ್ಯ ಚಾರ್ಟ್ ಸಿದ್ಧಪಡಿಸಿಕೊಂಡು, ವಾಟ್ಸಾಪ್ ಗ್ರೂಪ್ ಮೂಲಕ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳುವುದರ ಜೊತೆಗೆ ಸೇನಾ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಮಂಗಳೂರು ಆರ್ಮಿ ರಿಕ್ರೂಟ್‌ಮೆಂಟ್ ಕಚೇರಿಯ ನಿರ್ದೇಶಕ ಕರ್ನಲ್ ಜಿ. ಸೋಮು ಮಹಾರಾಜನ ಅವರು ರ‍್ಯಾಲಿ ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತದ ಅಗತ್ಯ ಸಹಕಾರ ಕೋರಿದರು.
ಸಭೆಯಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ, ಎನ್‌ಐಸಿ ಅಧಿಕಾರಿ ಶಿವಾನಂದ ಗೂಗವಾಡ, ಆಹಾರ ಇಲಾಖೆಯ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ತಹಶೀಲ್ದಾರ ಪ್ರಶಾಂತ ಚನಗೊಂಡ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Share this