ಶೀತಲಗೃಹ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.13:
ತಿಕೋಟಾ ತಾಲ್ಲೂಕಿನ ತೊರವಿ ಗ್ರಾಮದ ಬಳಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಮಂಡಳಿಯಿಂದ ನಿರ್ಮಾಣವಾಗುತ್ತಿರುವ ಶೀತಲಗೃಹಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.
ಒಟ್ಟು 141 ಎಕರೆ ಗುಂಟೆ ವಿಸ್ತೀರ್ಣ ಹೊಂದಿರುವ ದ್ರಾಕ್ಷಿ ಮತ್ತು ವೈನ್ ಮಂಡಳಿಯ ಆವರಣದಲ್ಲಿ ತಂತಿಬೇಲಿ, ರಸ್ತೆ ಹಾಗೂ 10 ಬೋರ್‌ವೆಲ್‌ಗಳ ವ್ಯವಸ್ಥೆ ಮಾಡಲಾಗಿದೆ. ನಬಾರ್ಡ್ ಯೋಜನೆಯಡಿ ಸುಮಾರು 10 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲಗೃಹ ನಿರ್ಮಾಣವಾಗುತ್ತಿದ್ದು, ಇನ್ನೂ 2ರಿಂದ 3 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತೋಟಗಾರಿಕೆ ಜಂಟಿ ನಿರ್ದೇಶಕ ಸಿದ್ದರಾಮಯ್ಯ ಬರಗಿಮಠ ಅವರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಶೀತಲಗೃಹದ ಬಳಕೆ, ನಿರ್ವಹಣೆ ಹಾಗೂ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಕುರಿತು ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಮುಂದಿನ ದಿನಗಳಲ್ಲಿ ಭೇಟಿ ನೀಡಿ ಸಮಗ್ರ ಮಾಹಿತಿ ನೀಡುವಂತೆ ಸೂಚಿಸಿದರು.
ಬಳಿಕ ಇಟ್ಟಂಗಿಹಾಳದಲ್ಲಿ ನಿರ್ಮಾಣವಾಗುತ್ತಿರುವ ಆಹಾರ ಸಂಸ್ಕರಣಾ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದರು. ಈ ವೇಳೆ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಘಟಕದ ಕುರಿತು ಮಾಹಿತಿ ನೀಡಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಹಾರ ಸಂಸ್ಕರಣಾ ಘಟಕಗಳಿಗೆ ಭೇಟಿ ನೀಡಿ, ವಿಜಯಪುರ ಜಿಲ್ಲೆಯಲ್ಲಿ ಬೆಳೆಯುವ ವಿವಿಧ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಅನುಗುಣವಾಗಿ ಕೈಗೊಳ್ಳಬಹುದಾದ ಸಂಸ್ಕರಣಾ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಿ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.

Share this