ಸಪ್ತಸಾಗರ ವಾರ್ತೆ,ವಿಜಯಪುರ, ಆ. 13:
ಮುಂಬರುವ ದಿನಗಳಲ್ಲಿ ಜೆಡಿಎಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ತಾಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳನ್ನು ಚುರುಕುಗೊಳಿಸಲು ವೀಕ್ಷಕರು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಅವರು ಕರೆ ನೀಡಿದರು.
ನಗರದ ಜೆಡಿಎಸ್ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ವೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೀಕ್ಷಕರ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ. ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ತಾಲೂಕು ಹಾಗೂ ಸ್ಥಳೀಯ ಮಟ್ಟದಲ್ಲಿರುವ ವಾಸ್ತವ ಸ್ಥಿತಿಗತಿಗಳನ್ನು ಅರಿತುಕೊಂಡು, ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಪ್ರತಿಯೊಂದು ತಾಲೂಕಿನಲ್ಲಿ ಪಕ್ಷದ ಸಂಘಟನೆ ಯಾವ ಹಂತದಲ್ಲಿದೆ, ಕಾರ್ಯಕರ್ತರ ಸಕ್ರಿಯತೆ ಹೇಗಿದೆ, ಪಕ್ಷದ ಸಂಘಟನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಕುರಿತು ವೀಕ್ಷಕರು ಸಮಗ್ರವಾಗಿ ಪರಿಶೀಲಿಸಬೇಕು. ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅವರ ಅಭಿಪ್ರಾಯ ಮತ್ತು ಸಲಹೆಗಳನ್ನು ಆಲಿಸಿ, ಅಗತ್ಯ ಮಾಹಿತಿಯನ್ನು ಪಕ್ಷದ ಜಿಲ್ಲಾ ಘಟಕಕ್ಕೆ ತಲುಪಿಸಬೇಕು ಎಂದು ಯಂಡಿಗೇರಿ ಹೇಳಿದರು.
ವೀಕ್ಷಕರು ಕೇವಲ ಸಭೆಗಳಿಗೆ ಸೀಮಿತವಾಗದೆ, ತಾಲೂಕು ಹಾಗೂ ಗ್ರಾಮ ಮಟ್ಟಕ್ಕೆ ತೆರಳಿ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಿ ಸಂಘಟನೆಯ ನೈಜ ಸ್ಥಿತಿಯನ್ನು ತಿಳಿದುಕೊಳ್ಳಬೇಕು. ಪಕ್ಷದ ಸಂಘಟನೆಯಲ್ಲಿ ಕಂಡುಬರುವ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಅಲ್ಲದೇ, ಪಕ್ಷದ ಸಿದ್ಧಾಂತ, ಕಾರ್ಯಕ್ರಮಗಳು ಹಾಗೂ ಸಂಘಟನೆಯ ಉದ್ದೇಶಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರು ಪ್ರಮುಖ ಪಾತ್ರ ವಹಿಸುತ್ತಾರೆ. ಆದ್ದರಿಂದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಮೂಡಿಸಿ, ಎಲ್ಲರನ್ನು ಒಗ್ಗೂಡಿಸಿಕೊಂಡು ಪಕ್ಷದ ಸಂಘಟನೆಯನ್ನು ಸದೃಢಗೊಳಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧ್ಯಕ್ಷರು ಹೇಳಿದರು.
ಸಭೆಯಲ್ಲಿ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ವೀಕ್ಷಕರಾದ ಶಿವನಗೌಡ ಬಿರಾದಾರ, ಮರಿಯಪ್ಪ ಗಿರಣಿವಡ್ಡರ, ಪೀರಪಾಶಾ ಗಚ್ಚಿಮಹಲ್, ರಶ್ಮಿ ಪಾಟೀಲ, ಸಂಜು ಹಿರೇಮಠ, ಹನುಮಂತ ತಳಕೇರಿ, ಕೌಸರ್ ಶೇಖ ಹಾಗೂ ರಾಜು ಹಿಪ್ಪರಗಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಭೆಯಲ್ಲಿ ವೀಕ್ಷಕರು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳು, ಸಂಘಟನಾ ಜವಾಬ್ದಾರಿಗಳು ಹಾಗೂ ಮುಂದಿನ ಕಾರ್ಯ ಯೋಜನೆಗಳ ಕುರಿತು ಚರ್ಚೆ ನಡೆಸಿದರು.
ಎಸ್.ಎಸ್. ಖಾದ್ರಿ ಇನಾಮದಾರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಜೆಡಿಎಸ್ ಸಂಘಟನೆ ಬಲವರ್ಧನೆಗೆ ಪರಿಣಾಮಕಾರಿಯಾಗಿ ಶ್ರಮಿಸಿ: ವೀಕ್ಷಕರಿಗೆ ಯಂಡಿಗೇರಿ ಕರೆ


