ಗ್ರಂಥಾಲಯಕ್ಕೆ ನಿವೇಶನ ಪಡೆದು ಸುಸಜ್ಜಿತ ಕಟ್ಟಡ ನಿರ್ಮಿಸಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳಿದ್ದಂತೆ: ಎಂ.ಎಸ್. ಕರಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 18 :
ಮಹಾನಗರ ವ್ಯಾಪ್ತಿಯ ಪ್ರತಿ ವಾರ್ಡ್‌ನಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಿಸಲು ಅಗತ್ಯವಿರುವ ನಿವೇಶನವನ್ನು ಪಡೆದು, ಸುಸಜ್ಜಿತ ಗ್ರಂಥಾಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮಹಾನಗರ ಪಾಲಿಕೆ ಮಹಾಪೌರ ಎಂ.ಎಸ್. ಕರಡಿ ಸೂಚಿಸಿದರು.
ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ ನಗರ ಗ್ರಂಥಾಲಯ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರ ಕೇಂದ್ರ ಗ್ರಂಥಾಲಯದ ಆವರಣದಲ್ಲಿರುವ ಖಾಲಿ ನಿವೇಶನದಲ್ಲಿ ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅನುದಾನದಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಿಸಲು ಅಗತ್ಯವಾದ ನೀಲನಕ್ಷೆ ಮತ್ತು ಅಂದಾಜು ಪತ್ರಿಕೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳಿದ್ದಂತೆ. ನಗರದ ಪ್ರತಿಯೊಬ್ಬ ನಾಗರಿಕನೂ ಗ್ರಂಥಾಲಯದ ಸೇವೆ ಪಡೆಯುವಂತೆ ಪ್ರೇರೇಪಿಸಬೇಕು. ಪ್ರತಿ ಬಡಾವಣೆಯ ಉದ್ಯಾನವನಗಳಲ್ಲಿ ಗ್ರಂಥಾಲಯಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಬದಲಾಗುತ್ತಿರುವ ಮಾಹಿತಿ ಹಾಗೂ ಓದುವ ಅಭಿರುಚಿಗೆ ಅನುಗುಣವಾಗಿ ಪುಸ್ತಕ ಓದುವ ಸಂಸ್ಕೃತಿಯನ್ನು ಬೆಳೆಸಬೇಕು. ಪ್ರಾಥಮಿಕ ಶಾಲೆಯಿಂದ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಓದುಗರಿಗೆ ಅನುಕೂಲವಾಗುವಂತೆ ಸ್ಪರ್ಧಾತ್ಮಕ ಪರೀಕ್ಷೆ, ವಿಷಯಾಧಾರಿತ ಪಠ್ಯ, ವಾಣಿಜ್ಯ, ಕಲೆ, ಸಾಹಿತ್ಯ, ಇತಿಹಾಸ, ಮಕ್ಕಳ ವ್ಯಕ್ತಿತ್ವ ವಿಕಸನ ಹಾಗೂ ಪ್ರಚಲಿತ ವಿದ್ಯಮಾನಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಶಾಖಾ ಗ್ರಂಥಾಲಯಗಳಲ್ಲಿ ಲಭ್ಯವಾಗುವಂತೆ ಮಾಡಬೇಕು ಎಂದರು.
ವಿವಿಧ ವಿಷಯಗಳ ಪುಸ್ತಕಗಳ ಪ್ರದರ್ಶನ ಆಯೋಜಿಸುವ ಮೂಲಕ ಯುವಜನತೆಯನ್ನು ಗ್ರಂಥಾಲಯಗಳತ್ತ ಆಕರ್ಷಿಸಿ, ಅವರಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸಬೇಕು. ಗ್ರಂಥಾಲಯಗಳ ಮಹತ್ವ ಕುರಿತು ವಿಚಾರ ಸಂಕಿರಣ, ಉಪನ್ಯಾಸ, ವಿಶೇಷ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರಗಳನ್ನು ಆಯೋಜಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರಡಿ ಹೇಳಿದರು.
ಸಭೆಯಲ್ಲಿ ನಗರ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾದ ಎಸ್.ಎಸ್. ಕನ್ನೂರ, ಡಾ. ಶಿವಗಂಗಾ, ಅಪ್ಪಾಸಾಹೇಬ ದಳವಾಯಿ, ಶೈಲಜಾ ಆರ್. ಹಾಲಾವರ ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಉಪನಿರ್ದೇಶಕ ಅಜಯಕುಮಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share this