ಸರಣಿ ದೌರ್ಜನ್ಯ ಖಂಡಿಸಿ ರಾಜ್ಯಮಟ್ಟದ ಹೋರಾಟ, ಹೆದ್ದಾರಿ ತಡೆಗೆ ಸಿದ್ಧತೆ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 23:
ರಾಜ್ಯದಲ್ಲಿ ದಲಿತರು, ಹಿಂದುಳಿದವರು ಹಾಗೂ ಶೋಷಿತ ಸಮುದಾಯಗಳ ಮೇಲೆ ಹಲ್ಲೆ, ಕೊಲೆ, ಅತ್ಯಾಚಾರ, ಸಾಮಾಜಿಕ ಬಹಿಷ್ಕಾರ ಸೇರಿದಂತೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿದ್ದರೂ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಖಂಡನೀಯ ಎಂದು ಭೀಮರಾಜ್ಯ ದಲಿತ್ ಸೇವಾ ಸಮಿತಿ (ರಿ.) ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಉಗಲವಾಟದಲ್ಲಿ ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವುದು, ಕೊಪ್ಪಳ ಹಾಗೂ ಚಿಕ್ಕಬಳ್ಳಾಪುರದಲ್ಲಿ ಕಳವು ಶಂಕೆಯಿಂದ ಬಾಲಕನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆಗಳು ನಾಗರಿಕ ಸಮಾಜ ತಲೆತಗ್ಗಿಸುವಂತಿವೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕುವಲ್ಲಿ ಸರ್ಕಾರ ವಿಫಲವಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಬಿಎಸ್ಪಿ ಮುಖಂಡ ಭೂಮಾನಂದ ಅವರ ಹತ್ಯೆ ಹಾಗೂ ಅಪ್ರಾಪ್ತ ಬಾಲಕಿ ಅಶ್ವಿನಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳು ಸಮಾಜವನ್ನು ಬೆಚ್ಚಿಬೀಳಿಸಿವೆ. ವಿಜಯಪುರ ಜಿಲ್ಲೆಯ ಚಬನೂರು ಹಾಗೂ ಗುಂಡಕನಾಳದಲ್ಲಿಯೂ ಯುವಕರ ಮೇಲೆ ಭೀಕರ ದಾಳಿ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದರೊಂದಿಗೆ ಧಾರವಾಡದ ಕುಂಬಾರಕೊಪ್ಪದಲ್ಲಿ ಏಳು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ವಿಧಿಸಿರುವುದು ಹಾಗೂ ಯಾದಗಿರಿ ಜಿಲ್ಲೆಯ ಕಿಲ್ಲನಕೇರಾದಲ್ಲಿ ಭಜಂತ್ರಿ ಸಮುದಾಯದವರಿಗೆ ಊರು ಬಿಡುವಂತೆ ಬೆದರಿಕೆ ಹಾಕಿರುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾದ ಕೃತ್ಯಗಳಾಗಿವೆ. ಇಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕಲು ಸರ್ಕಾರ ಕಠಿಣ ನಿಲುವು ತಾಳಬೇಕು ಎಂದು ಒತ್ತಾಯಿಸಿದ್ದಾರೆ.
ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ದೌರ್ಜನ್ಯ ಪ್ರಕರಣಗಳಲ್ಲಿನ ಆರೋಪಿಗಳನ್ನು ಯಾವುದೇ ಒತ್ತಡಕ್ಕೆ ಮಣಿಯದೆ ತಕ್ಷಣ ಬಂಧಿಸಬೇಕು. ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಂಡು ಸಂತ್ರಸ್ತರಿಗೆ ಸೂಕ್ತ ಭದ್ರತೆ, ತಕ್ಷಣದ ಪರಿಹಾರ ಹಾಗೂ ತ್ವರಿತ ನ್ಯಾಯ ಒದಗಿಸಬೇಕು ಎಂದು ಅಪ್ಪುರಾಜ್ ನಿಮಾದಾರ ಆಗ್ರಹಿಸಿದ್ದಾರೆ.
ದಲಿತರು, ಹಿಂದುಳಿದವರು ಹಾಗೂ ಶೋಷಿತ ಸಮುದಾಯಗಳ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ. ದೌರ್ಜನ್ಯಗಳನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸರ್ಕಾರ ನೀಡಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಸಂಘಟಿತ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ.
ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ರಾಜ್ಯಮಟ್ಟದ ಬೃಹತ್ ಹೋರಾಟ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ನಡೆಸಲಾಗುವುದು. ಈ ಹೋರಾಟದ ಸಂಪೂರ್ಣ ಹೊಣೆ ಸರ್ಕಾರದ್ದೇ ಆಗಿರಲಿದೆ ಎಂದು ಭೀಮರಾಜ್ಯ ದಲಿತ್ ಸೇವಾ ಸಮಿತಿ (ರಿ.) ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.


