ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 1: ಬಬಲೇಶ್ವರ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಯೋಜನೆಗಳ ಅನುಷ್ಠಾನದಿಂದ ಪ್ರೇರಿತರಾಗಿ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರ ಸಮ್ಮುಖದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಮುಖಂಡ ಸುನೀಲ ಅವರ ನೇತೃತ್ವದಲ್ಲಿ ಗುರಪ್ಪ ರಂಗಪ್ಪಗೋಳ, ಕೂಸಪ್ಪ ನರಲೆ, ವಿಠ್ಠಲ ತುಪನೂರ, ಸಾವಿತ್ರಿ ಡೇಂಬ್ರಿ, ಸುರೇಖಾ ಡೇಂಬ್ರಿ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ, ಹೊನವಾಡ ಗ್ರಾಮದಲ್ಲಿ ಗಮನಾರ್ಹ ಪ್ರಮಾಣದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲಾಗಿದ್ದು, ಸುಮಾರು 15ರಿಂದ 20 ಸಾವಿರ ಎಕರೆ ಭೂಮಿ ನೀರಾವರಿಗೆ ಒಳಪಟ್ಟಿದೆ. ಮುಂದಿನ ದಿನಗಳಲ್ಲಿಯೂ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ಮುಂದುವರಿಯಲಿವೆ ಎಂದರು.
ಹೊಸಬರು–ಹಳಬರು ಎಂಬ ಭೇದವಿಲ್ಲದೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಪಕ್ಷ ಸಂಘಟನೆಯನ್ನು ಬಲಪಡಿಸಲಾಗುವುದು. ಹೊನವಾಡದ ಮುಖಂಡರು ಹಾಗೂ ಕಾರ್ಯಕರ್ತರ ಸೇರ್ಪಡೆಯಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಘಟನೆ ಮತ್ತಷ್ಟು ಬಲಗೊಂಡಿದೆ ಎಂದು ಹೇಳಿದರು.
ಮುಖಂಡ ಸುನೀಲ ಮಾತನಾಡಿ, ಸಚಿವ ಎಂ.ಬಿ. ಪಾಟೀಲ ಅವರ ಬೆನ್ನೆಲುಬಾಗಿ ಕೆಲಸ ಮಾಡುತ್ತೇವೆ. ಕಳೆದ 20ಕ್ಕೂ ಹೆಚ್ಚು ವರ್ಷಗಳಿಂದ ಬಿಜೆಪಿಯಲ್ಲಿದ್ದ ನಮಗೆ ಭ್ರಮನಿರಸನವಾಗಿದ್ದು, ಸಚಿವ ಎಂ.ಬಿ. ಪಾಟೀಲ ಅವರ ಇಚ್ಛಾಶಕ್ತಿ ಹಾಗೂ ನಿರಂತರ ಕಾಳಜಿಯಿಂದ ಬಬಲೇಶ್ವರ ಕ್ಷೇತ್ರ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಅವರ ನಾಯಕತ್ವದ ಮೇಲೆ ವಿಶ್ವಾಸವಿಟ್ಟು ಹೊನವಾಡ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ರಾಜು ಆಲಗೂರ, ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಅಭಿವೃದ್ಧಿ ಕಾರ್ಯಗಳಿಂದ ಪ್ರೇರಣೆ: ಹೊನವಾಡದ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ಗೆ


