ವಿಜಯಪುರದಲ್ಲಿ ಫ್ಲೈಯಿಂಗ್ ಟ್ರೈನಿಂಗ್ ಅಕಾಡೆಮಿ: ಉತ್ತರ ಕರ್ನಾಟಕದ ಯುವಕರಿಗೆ ಹೊಸ ಅವಕಾಶ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 3:
ಐತಿಹಾಸಿಕ ವಿಜಯಪುರ ವಿಮಾನ ನಿಲ್ದಾಣದಲ್ಲಿ ಸ್ಯಾಟಲೈಟ್ ಫ್ಲೈಯಿಂಗ್ ಟ್ರೈನಿಂಗ್ ಅಕಾಡೆಮಿ ಸ್ಥಾಪಿಸಲು ಕಾರ್ವರ್ ಏವಿಯೇಷನ್ ಆಸಕ್ತಿ ವ್ಯಕ್ತಪಡಿಸಿರುವುದು ಉತ್ತರ ಕರ್ನಾಟಕದ ಯುವಜನತೆಗೆ ಹೊಸ ಅವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆ ಮೂಡಿಸಿದೆ ಎಂದು ಸಾಮಾಜಿಕ ಕಾರ್ಯಕರ್ತ ರಾಘವ್ ಅಣ್ಣಿಗೇರಿ ತಿಳಿಸಿದ್ದಾರೆ.
ವಿಮಾನಯಾನ ಕ್ಷೇತ್ರದಲ್ಲಿ ಶಿಕ್ಷಣ, ತರಬೇತಿ ಹಾಗೂ ಉದ್ಯೋಗದ ಅವಕಾಶಗಳನ್ನು ಹೆಚ್ಚಿಸುವುದರೊಂದಿಗೆ ವಿಜಯಪುರವನ್ನು ಉತ್ತರ ಕರ್ನಾಟಕದ ಪ್ರಮುಖ ವಿಮಾನಯಾನ ತರಬೇತಿ ಕೇಂದ್ರವಾಗಿ ರೂಪಿಸಲು ಇದು ಮಹತ್ವದ ಹೆಜ್ಜೆಯಾಗಲಿದೆ. ಅಕಾಡೆಮಿ ಆರಂಭವಾದರೆ ಪೈಲಟ್ ಆಗುವ ಕನಸು ಹೊಂದಿರುವ ನೂರಾರು ಯುವಕ-ಯುವತಿಯರಿಗೆ ಸ್ಥಳೀಯವಾಗಿಯೇ ತರಬೇತಿ ಪಡೆಯುವ ಅವಕಾಶ ದೊರೆಯಲಿದೆ ಎಂದು ಅವರು ಹೇಳಿದ್ದಾರೆ.
ವಿಜಯಪುರದ ವಿಮಾನಯಾನ ಮೂಲಸೌಕರ್ಯ ಅಭಿವೃದ್ಧಿಗೆ ದೂರದೃಷ್ಟಿ ಹಾಗೂ ನಿರಂತರ ಪ್ರಯತ್ನ ಮಾಡುತ್ತಿರುವ ಸಚಿವ ಎಂ.ಬಿ. ಪಾಟೀಲರಿಗೆ ಅಭಿನಂದನೆ ಸಲ್ಲಿಸಿದ ಅವರು, ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹಾಗೂ ರಾಜ್ಯದ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಗತ್ಯ ಪ್ರೋತ್ಸಾಹ ನೀಡುವ ಮೂಲಕ ವಿಮಾನಯಾನ ಕ್ಷೇತ್ರದ ಬೆಳವಣಿಗೆಗೆ ಮತ್ತಷ್ಟು ವೇಗ ನೀಡಬೇಕು ಎಂದು ಆಶಿಸಿದರು.
ವಿಮಾನ ನಿಲ್ದಾಣದ ಸ್ಥಾಪನೆ ಹಾಗೂ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಶ್ರಮಿಸಿದ ಜನಪ್ರತಿನಿಧಿಗಳು, ಹೋರಾಟಗಾರರು, ಸಂಘ-ಸಂಸ್ಥೆಗಳು ಮತ್ತು ವಿಜಯಪುರದ ನಾಗರಿಕರಿಗೆ ಕೃತಜ್ಞತೆ ಸಲ್ಲಿಸಿದ ಅವರು, ನಗರದ ಅಭಿವೃದ್ಧಿ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ವಿಜಯಪುರದ ಯುವಕರ ಭವಿಷ್ಯಕ್ಕೆ ಇನ್ನಷ್ಟು ಅವಕಾಶಗಳು ದೊರೆಯಲಿವೆ ಎಂದು ತಿಳಿಸಿದ್ದಾರೆ.

Share this