ರಾಣಿ ಚನ್ನಮ್ಮನ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಲಿ: ಪ್ರೊ. ತ್ಯಾಗರಾಜ

ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ ಮತ್ತು ಸಾಹಸದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16:

ಕಿತ್ತೂರು ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ ಮತ್ತು ಸಾಹಸದ ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ವಿಶೇಷವಾಗಿ ವಿದ್ಯಾರ್ಥಿಗಳು ಈ ಆದರ್ಶಗಳನ್ನು ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ ಕರೆ ನೀಡಿದರು.
ನಗರದ ಡಾ. ಫ.ಗು. ಹಳಕಟ್ಟಿ ಸ್ನಾತಕೋತ್ತರ ಕೇಂದ್ರದಲ್ಲಿ ರಾಣಿ ಚನ್ನಮ್ಮ ಅಧ್ಯಯನ ಪೀಠದ ವತಿಯಿಂದ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಣಿ ಚನ್ನಮ್ಮನ ಜೀವನ ಮತ್ತು ಹೋರಾಟದ ಇತಿಹಾಸ ಸ್ತ್ರೀ ಸಬಲೀಕರಣಕ್ಕೆ ಪ್ರೇರಣಾದಾಯಕವಾಗಿದೆ. ವಿದ್ಯಾರ್ಥಿಗಳು ಅವರ ಚರಿತ್ರೆಯನ್ನು ಅಧ್ಯಯನ ಮಾಡುವ ಮೂಲಕ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅಧ್ಯಯನ ಪೀಠವು ಸಂಯೋಜಿತ ಕಾಲೇಜುಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.
ಕಿತ್ತೂರು ಸಂಸ್ಥಾನದ ಇತಿಹಾಸ ಕುರಿತು ನಾಲ್ಕು ಮಹಾವಿದ್ಯಾಲಯಗಳಲ್ಲಿ ವಿಭಿನ್ನ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸಗಳನ್ನು ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಡಾ. ಕೆ.ಎನ್. ದೊಡ್ಡಮನಿ ಮಾತನಾಡಿ, ರಾಣಿ ಚನ್ನಮ್ಮ ಹಾಗೂ ಕಿತ್ತೂರು ಸಂಸ್ಥಾನಕ್ಕೆ ಸಂಬಂಧಿಸಿದ ಚರಿತ್ರೆಯ ಕುರಿತು ಸಂಶೋಧನಾ ಯೋಜನೆಗಳನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ರಾಣಿ ಚನ್ನಮ್ಮ ಅಧ್ಯಯನ ಪೀಠದ ನಿರ್ದೇಶಕ ಪ್ರೊ. ಎಸ್.ಎಂ. ಗಂಗಾಧರಯ್ಯ, ಸ್ನಾತಕೋತ್ತರ ಕೇಂದ್ರದ ಸಂಯೋಜಕ ಡಾ. ಚಂದ್ರಕಾಂತ ಕೋಳಿಗುಡ್ಡೆ, ಉಪಕುಲಸಚಿವ ಡಾ. ಡಿ.ಕೆ. ಕಾಂಬಳೆ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share this