ಕಬ್ಬಿಗೆ ಟನ್ಗೆ ₹5,500 ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 27:
ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ, ಸೆಪ್ಟೆಂಬರ್ 29ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹುಬ್ಬಳ್ಳಿ ನಿವಾಸಕ್ಕೆ 2 ಲಕ್ಷಕ್ಕೂ ಅಧಿಕ ರೈತರೊಂದಿಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ಕಳೆದ 30 ವರ್ಷಗಳಿಂದ ಕಬ್ಬು ಬೆಳೆಗಾರರಿಗೆ ವೈಜ್ಞಾನಿಕ ಬೆಲೆ ದೊರೆಯುತ್ತಿಲ್ಲ. ಸಕ್ಕರೆ ಕಾರ್ಖಾನೆಗಳಿಂದ ರೈತರ ಶೋಷಣೆ ಮುಂದುವರಿದಿದ್ದು, ಸರ್ಕಾರಗಳು ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿವೆ ಎಂದು ಆರೋಪಿಸಿದರು.
ಸಂಘಟನೆಯ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ಸಕ್ಕರೆಗೆ ಕನಿಷ್ಠ ಮಾರಾಟ ಬೆಲೆ (ಎಂಎಸ್ಪಿ) ₹60ಕ್ಕೆ ಹೆಚ್ಚಿಸಬೇಕು. 2026-27ನೇ ಸಾಲಿನಲ್ಲಿ ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನಿಗದಿಪಡಿಸಬೇಕು. ಸರ್ಕಾರದ ವತಿಯಿಂದ ಡಿಜಿಟಲ್ ತೂಕದ ಯಂತ್ರಗಳನ್ನು ಅಳವಡಿಸಿ ತೂಕದಲ್ಲಿ ಪಾರದರ್ಶಕತೆ ತರಬೇಕು ಎಂದು ಆಗ್ರಹಿಸಿದರು.
ಕಬ್ಬಿನ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು. ಕಬ್ಬಿನ ಇಳುವರಿ ನಿರ್ಧಾರ ಪ್ರಕ್ರಿಯೆಯಲ್ಲಿ ರೈತ ಮುಖಂಡರು ಹಾಗೂ ಸರ್ಕಾರಿ ಅಧಿಕಾರಿಗಳನ್ನು ಒಳಗೊಳ್ಳಬೇಕು. ಸಕ್ಕರೆ ಕಾರ್ಖಾನೆಗಳಿಂದ ಸೃಷ್ಟಿಯಾಗುವ ಆದಾಯದಲ್ಲಿ ಶೇ.75ರಷ್ಟು ರೈತರಿಗೆ ಹಾಗೂ ಶೇ.25ರಷ್ಟು ಕಾರ್ಖಾನೆಗಳಿಗೆ ನೀಡುವ ವ್ಯವಸ್ಥೆ ಜಾರಿಯಾಗಬೇಕು ಎಂದು ಒತ್ತಾಯಿಸಿದರು.
ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ ಮಾತನಾಡಿ, ಕಬ್ಬಿನಿಂದ ವಾರ್ಷಿಕವಾಗಿ ಸೃಷ್ಟಿಯಾಗುವ ಆದಾಯದಲ್ಲಿ ರೈತರಿಗೆ ನ್ಯಾಯಯುತ ಪಾಲು ದೊರೆಯಬೇಕು. ಕಾರ್ಖಾನೆಗಳ ಆದಾಯವನ್ನು ಪಾರದರ್ಶಕವಾಗಿ ಆಡಿಟ್ ಮಾಡುವ ವ್ಯವಸ್ಥೆ ಜಾರಿಗೆ ಬರಬೇಕು. ಡಾ. ಎಂ.ಎಸ್. ಸ್ವಾಮಿನಾಥನ್ ವರದಿ ಶಿಫಾರಸುಗಳನ್ನು ಜಾರಿಗೊಳಿಸಿ, ಎಲ್ಲ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ C2+50% ಆಧಾರದ ಮೇಲೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ.29ರಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸಕ್ಕೆ ಬೃಹತ್ ಮುತ್ತಿಗೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಮಹಾದೇವ ಬನಸೋಡೆ, ಜಿಲ್ಲಾ ಕಾರ್ಯಾಧ್ಯಕ್ಷ ಪ್ರಕಾಶ ತೇಲಿ, ಸಂಗಪ್ಪ ತಕ್ಕೆ, ಅಮರೇಶ ಬೈರಗೊಂಡ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.


