ಸಪ್ತಸಾಗರ ವಾರ್ತೆ,ವಿಜಯಪುರ, ಅ. 6: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಹಾಗೂ ಆಯೋಗದ ಸದಸ್ಯೆ ಗೀತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಕೆಪಿಎಸ್ಸಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಭ್ರಷ್ಟಾಚಾರದ ಕುರಿತು ಸಮಗ್ರ ತನಿಖೆ ನಡೆಸಬೇಕು. ಈ ಹಿಂದೆ ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಅಸೋಸಿಯೇಷನ್ನೊಂದಿಗೆ ತಾವು ರಿಟ್ ಅರ್ಜಿ ಸಲ್ಲಿಸಿದ್ದಾಗಿ ಅವರು ತಿಳಿಸಿದ್ದಾರೆ.
ಅರ್ಹತೆ, ಪ್ರತಿಭೆ ಹಾಗೂ ಪರಿಶ್ರಮದ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ದೊರಕಿಸಿಕೊಡಬೇಕಿದ್ದ ಆಯೋಗದ ಕಾರ್ಯವೈಖರಿ ಕುರಿತು ಹಲವು ಆರೋಪಗಳು ಕೇಳಿಬಂದಿವೆ. ಆಯೋಗದಲ್ಲಿ ಅಕ್ರಮ ಅಥವಾ ಭ್ರಷ್ಟಾಚಾರ ನಡೆದಿದ್ದರೆ ಅದರ ಸಂಪೂರ್ಣ ಸತ್ಯವನ್ನು ನಿಷ್ಪಕ್ಷಪಾತ ತನಿಖೆಯಿಂದ ಹೊರತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಉದ್ಯೋಗ ಕೊಡಿಸುವುದಾಗಿ ಅಭ್ಯರ್ಥಿಗಳಿಂದ ಹಣ ಪಡೆದಿರುವ ಆರೋಪಗಳು ಸಾಬೀತಾದಲ್ಲಿ ಸಂಬಂಧಪಟ್ಟ ಸದಸ್ಯರು, ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳಿಂದ ಅನೇಕ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗಿದ್ದು, ಕೆಲವರು ವಯೋಮಿತಿ ಮೀರುವ ಪರಿಸ್ಥಿತಿ ಎದುರಿಸಿದ್ದಾರೆ ಎಂದು ಯತ್ನಾಳ ಹೇಳಿದ್ದಾರೆ.
ತನಿಖೆ ಯಾವುದೇ ರೀತಿಯಲ್ಲಿ ಪ್ರಭಾವಕ್ಕೊಳಗಾಗದಂತೆ ಕೆಪಿಎಸ್ಸಿಯ ಆಡಳಿತಾತ್ಮಕ ಹಾಗೂ ತಾಂತ್ರಿಕ ಸಿಬ್ಬಂದಿಯನ್ನು ಅಗತ್ಯವಿದ್ದಲ್ಲಿ ವರ್ಗಾವಣೆ ಮಾಡಬೇಕು. ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಕುರಿತು ಪರಿಶೀಲನೆ ನಡೆಸಿ, ಕಾನೂನುಬದ್ಧ ಕ್ರಮಕ್ಕೆ ಒಳಪಡುವ ಖಾತೆಗಳನ್ನು ತಕ್ಷಣವೇ ಪರಿಶೀಲನೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ವಿರುದ್ಧದ ಆರೋಪಗಳ ಹಿನ್ನೆಲೆಯಲ್ಲಿ ಸರ್ಕಾರ ಕಾನೂನುಬದ್ಧ ಪ್ರಕ್ರಿಯೆ ಅನುಸರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರಕರಣಗಳ ತ್ವರಿತ ವಿಚಾರಣೆಗೆ ಅಗತ್ಯವಿದ್ದರೆ ಫಾಸ್ಟ್ಟ್ರ್ಯಾಕ್ ನ್ಯಾಯಾಲಯಗಳ ವ್ಯವಸ್ಥೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪರೀಕ್ಷಾ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಟ್ಯಾಂಪರ್ಪ್ರೂಫ್ ಪರೀಕ್ಷಾ ವ್ಯವಸ್ಥೆ, ಪ್ರತ್ಯೇಕ ವಿಚಕ್ಷಣಾ ದಳ, ಪರೀಕ್ಷಾರ್ಥಿ ಸ್ನೇಹಿ ವ್ಯವಸ್ಥೆ ಹಾಗೂ ದೋಷರಹಿತ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಕ್ರಮಗಳನ್ನು ಜಾರಿಗೆ ತರಬೇಕು. ಪರೀಕ್ಷಾ ಅಕ್ರಮಗಳು ಸಾಬೀತಾದಲ್ಲಿ ಕಠಿಣ ದಂಡ ಮತ್ತು ಶಿಕ್ಷೆ ವಿಧಿಸುವಂತೆ ಸೂಕ್ತ ಕಾನೂನು ರೂಪಿಸಬೇಕು ಎಂದು ಯತ್ನಾಳ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
ಕೆಪಿಎಸ್ಸಿ ಅಧ್ಯಕ್ಷ, ಸದಸ್ಯರ ಬಂಧನ ಸ್ವಾಗತಾರ್ಹ: ಯತ್ನಾಳ


