ಸಪ್ತಸಾಗರ ವಾರ್ತೆ,ವಿಜಯಪುರ, ಅ. 11:
ವಿಜಯಪುರ ಜಿಲ್ಲೆಗೆ ಸಂವಿಧಾನದ 371(ಜೆ) ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾ 371(ಜೆ) ಹೋರಾಟ ಸಮಿತಿ ಮುಖಂಡರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೋಡೆ ಅವರಿಗೆ ಮನವಿ ಸಲ್ಲಿಸಿದರು.
371(ಜೆ) ಮೀಸಲಾತಿ ಜಾರಿಗೊಳಿಸುವ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯನ್ನು ಕೈಬಿಟ್ಟಿರುವುದರಿಂದ ಶಿಕ್ಷಣ, ಉದ್ಯೋಗ ಹಾಗೂ ಅಭಿವೃದ್ಧಿ ಕ್ಷೇತ್ರಗಳಲ್ಲಿ ಜಿಲ್ಲೆಯ ಜನರಿಗೆ ಅನ್ಯಾಯವಾಗಿದೆ. ಹೀಗಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು, ವಿಜಯಪುರ ಜಿಲ್ಲೆಯನ್ನು 371(ಜೆ) ವ್ಯಾಪ್ತಿಗೆ ಸೇರಿಸುವಂತೆ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ, ಯುವಕರಿಗೆ ಉದ್ಯೋಗ ನೇಮಕಾತಿಯಲ್ಲಿ ಮೀಸಲಾತಿ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ದೊರೆಯುವ ವಿಶೇಷ ಅನುದಾನ ಸೇರಿದಂತೆ ವಿವಿಧ ಸೌಲಭ್ಯಗಳು ಲಭ್ಯವಾಗಬೇಕು. ಜಿಲ್ಲೆಯ ಸುಮಾರು 25 ಲಕ್ಷ ಜನರ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸಂವಿಧಾನದ 371(ಜೆ)ಗೆ ತಿದ್ದುಪಡಿ ಮಾಡಿ ವಿಜಯಪುರ ಜಿಲ್ಲೆಯನ್ನು ಮೀಸಲಾತಿ ವ್ಯಾಪ್ತಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ವಸಂತ ಹೊನಮೋಡೆ ಅವರು, ಹೋರಾಟ ಸಮಿತಿಯ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದರು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹಾಗೂ ಜಿಲ್ಲೆಯ ಎಲ್ಲ ಶಾಸಕರ ಗಮನಕ್ಕೆ ತಂದು ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಜಿಲ್ಲಾ 371(ಜೆ) ಹೋರಾಟ ಸಮಿತಿ ಮುಖಂಡರಾದ ವಿನೋದ ಖೇಡ, ಲಾಯಪ್ಪ ಇಂಗಳೆ, ಅನಿಲ ಇಕ್ಕಡೆ, ನ್ಯಾಯವಾದಿ ಎನ್. ಸುರೇಶಕುಮಾರ, ಮಹಾದೇವಪ್ಪ ತೇಲಿ, ಸಾಗರ ಸಾವಳಗಿ, ಅರುಣಕುಮಾರ ತೇರದಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಕಲ್ಪಿಸಲು ಆಗ್ರಹ


