ಸಪ್ತಸಾಗರ ವಾರ್ತೆ,ವಿಜಯಪುರ, ಅ. 14:
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ. ಡಿ.ಜಿ. ಸಾಗರ ಬಣ) ನೇತೃತ್ವದಲ್ಲಿ ಅ.16ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣನವರ ತಿಳಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಹಾಗೂ ಎಸ್ಐಆರ್ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ.
ಮತದಾರರ ಗುರುತಿನ ಚೀಟಿ ನೀಡುವ ಮತ್ತು ರದ್ದುಪಡಿಸುವ ಪ್ರಕ್ರಿಯೆ ಕಾನೂನು ಹಾಗೂ ನಿಯಮಗಳ ಅನ್ವಯವೇ ನಡೆಯಬೇಕು. ಆದರೆ ಎಸ್ಐಆರ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳಿವೆ ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿದೆ. ಅರ್ಹ ಮತದಾರರ ಹಕ್ಕಿಗೆ ಧಕ್ಕೆ ಉಂಟಾಗದಂತೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಎಸ್ಐಆರ್ಗೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತರು ಕೈಗೊಂಡಿರುವ ನಿರ್ಧಾರಗಳ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಕ್ರಿಯೆಯ ಸಮಗ್ರ ಪರಿಶೀಲನೆ ನಡೆಸಬೇಕು. ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕಾಪಾಡುವುದು ಅತ್ಯಗತ್ಯ ಎಂದು ಅವರು ಹೇಳಿದ್ದಾರೆ.
ಪ್ರತಿಭಟನೆಯಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ರಮೇಶ ಧರಣಾಕರ, ಸಹ ಸಂಚಾಲಕ ಮಹಾಂತೇಶ ಸಾಸಬಾಳ ಸೇರಿದಂತೆ ದಲಿತ ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹಿಸಿ ಅ.16ರಂದು ಪ್ರತಿಭಟನೆ


