ಅ. 18ರಂದು ಉಪ್ಪಾರ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 17:
ವಿಜಯಪುರ ಜಿಲ್ಲಾ ಉಪ್ಪಾರ ನೌಕರರ ಸಂಘದ ವತಿಯಿಂದ 2025-26ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು, ನೂತನವಾಗಿ ನೇಮಕಗೊಂಡ ನೌಕರರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಅ. 18ರಂದು ಬೆಳಿಗ್ಗೆ 10.30ಕ್ಕೆ ನಗರದ ಸೆಟಲೈಟ್ ಬಸ್ ನಿಲ್ದಾಣದ ಸಮೀಪದ ರಾಜರಾಜೇಶ್ವರಿ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ವಿದ್ಯಾನಗರದ ಚನ್ಮೂಲಾದ್ರಿ ಶಿಲಾಪುರಿ ಮಹಾಸಂಸ್ಥಾನದ ಭಗೀರಥ ಪೀಠದ ಡಾ. ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಚಿಕ್ಕಲಕಿ ಕ್ರಾಸ್‌ನ ಸಾಧನ ತಪೋವನದ ಶಿವಾನಂದ ಮಹಾಸ್ವಾಮಿಗಳು ಹಾಗೂ ಪಂಢರಪುರದ ವಿಶ್ವಕೃಪ ಆಶ್ರಮದ ಮಾತೋಶ್ರೀ ಶಾಂತಮ್ಮನವರು ಸಾನ್ನಿಧ್ಯ ವಹಿಸಲಿದ್ದಾರೆ.
ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಸಚಿವ ಹಾಗೂ ಬಸವನಬಾಗೇವಾಡಿ ಶಾಸಕ ಶಿವಾನಂದ ಎಸ್. ಪಾಟೀಲ ಮತ್ತು ವಿಜಯಪುರ ನಗರ ಶಾಸಕ ಬಸನಗೌಡ ಆರ್. ಪಾಟೀಲ (ಯತ್ನಾಳ) ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಿದ್ದಾರೆ.
ವಿಜಯಪುರ ಜಿಲ್ಲಾ ಉಪ್ಪಾರ ನೌಕರರ ಸಂಘದ ಅಧ್ಯಕ್ಷ ಪುಂಡಲೀಕ ಭೀ. ಉಪ್ಪಾರ ಅಧ್ಯಕ್ಷತೆ ವಹಿಸಲಿದ್ದಾರೆ. ನಾಗಠಾಣ ಶಾಸಕ ವಿಠ್ಠಲ ಕಟಕಧೊಂಡ ಹಾಗೂ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಹುಬ್ಬಳ್ಳಿಯ ಸಿದ್ಧಾರೂಢ ಮಠದ ಧರ್ಮದರ್ಶಿ ಶಾಮಾನಂದ ಪೂಜಾರಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ, ಕೆಎಎಸ್ ಅಧಿಕಾರಿ ಶಂಕರ ಬಿ. ಬೆಳ್ಳುಬ್ಬಿ ಉಪನ್ಯಾಸ ನೀಡಲಿದ್ದಾರೆ.
ಸಂಘದ ಪದಾಧಿಕಾರಿಗಳು, ನೌಕರರು ಹಾಗೂ ಭಗೀರಥ ಮಹರ್ಷಿಗಳ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಘದ ಅಧ್ಯಕ್ಷ ಪುಂಡಲೀಕ ಉಪ್ಪಾರ ಹಾಗೂ ಪ್ರಧಾನ ಕಾರ್ಯದರ್ಶಿ ಸಂಗಪ್ಪ ಪಡಸಲಗಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this