ಯತ್ನಾಳರಿಂದ ಜೀವ ಬೆದರಿಕೆ ಆರೋಪ: ಕ್ರಮಕ್ಕೆ ರಜಪೂತ ಮನವಿ

ವಿಡಿಯೋ ಸಾಕ್ಷ್ಯಗಳಿರುವ ಪೆನ್‌ಡ್ರೈವ್‌ ಪೊಲೀಸ್ ಇಲಾಖೆಗೆ ಹಸ್ತಾಂತರ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 19: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತನಗೆ ಹಾಗೂ ತನ್ನ ಕುಟುಂಬಸ್ಥರಿಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ, ಶಾಸಕ ಯತ್ನಾಳ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಂಡು ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿದ ರಜಪೂತ, ತಮ್ಮ ಆರೋಪಕ್ಕೆ ಪೂರಕವಾಗಿ ಜೀವ ಬೆದರಿಕೆ ಹಾಗೂ ನಿಂದನೆಗೆ ಸಂಬಂಧಿಸಿದ ವಿಡಿಯೋಗಳಿರುವ ಪೆನ್‌ಡ್ರೈವ್‌ನ್ನು ಪೊಲೀಸರಿಗೆ ಹಸ್ತಾಂತರಿಸಿದರು.
ಈ ಕುರಿತು ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಶಾಸಕ ಯತ್ನಾಳ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಸಾರ್ವಜನಿಕವಾಗಿಯೇ ತಮಗೆ ಜೀವ ಬೆದರಿಕೆ ಹಾಕಲಾಗಿದೆ. ತಮ್ಮ ಮಕ್ಕಳನ್ನೂ ಉಲ್ಲೇಖಿಸಿ ಬೆದರಿಕೆ ಹಾಕಲಾಗಿದ್ದು, ಅತ್ಯಂತ ಅಸಂಬದ್ಧ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಲಾಗಿದೆ ಎಂದು ಆರೋಪಿಸಿದರು.

‘ಈ ಹಿಂದೆಯೂ ಹಲವು ಬಾರಿ ಜೀವ ಬೆದರಿಕೆ’

ಶಾಸಕ ಯತ್ನಾಳ ಅವರು ಈ ಹಿಂದೆಯೂ ಹಲವು ಬಾರಿ ಇದೇ ರೀತಿಯಲ್ಲಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ರಜಪೂತ ಆರೋಪಿಸಿದರು. ಈ ಸಂಬಂಧದ ವಿಡಿಯೋ ಸಾಕ್ಷ್ಯಗಳನ್ನು ಪೊಲೀಸರಿಗೆ ನೀಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ತಮ್ಮ ರಾಜಕೀಯ ಬೆಳವಣಿಗೆಯನ್ನು ಸಹಿಸದೆ ಈ ರೀತಿಯ ಬಹಿರಂಗ ಬೆದರಿಕೆ ಹಾಗೂ ನಿಂದನೆ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ತಮ್ಮ ಹಾಗೂ ಕುಟುಂಬದ ಸುರಕ್ಷತೆಗೆ ಅಗತ್ಯ ರಕ್ಷಣೆ ಒದಗಿಸುವಂತೆಯೂ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಯುವ ಮುಖಂಡ ನಂದು ಗಡಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share this