ಸೋನಂ ವಾಂಗ್ಚುಕ್‌ರನ್ನು ಬಲವಂತವಾಗಿ ತೆರವುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ: ಎಐಡಿವೈಒ ಆಕ್ರೋಶ

ಸಪ್ತಸಾಗರ ವಾರ್ತೆ,ವಿಜಯಪುರ, ಜು.18:
ಎನ್‌ಇಇಟಿ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಳೆದ 21 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರವಾದಿ, ವಿಜ್ಞಾನಿ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರನ್ನು ಪೊಲೀಸರು ಬಲವಂತವಾಗಿ ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿರುವ ಕ್ರಮವನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಶನ್ (ಎಐಡಿವೈಒ) ಮುಖಂಡರು ಶನಿವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದ ಎಐಡಿಐಒ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಹರಿ ಹಾಯ್ದರು.
ಶಾಂತಿಯುತ ಪ್ರತಿಭಟನೆ ನಡೆಸುವುದು ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಮೂಲಭೂತ ಹಕ್ಕು. ಅಂತಹ ಹಕ್ಕನ್ನು ಗೌರವಿಸುವ ಬದಲು ಪೊಲೀಸ್ ಬಲದ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಹಾಗೂ ಸರ್ವಾಧಿಕಾರಿ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಎಐಡಿಐಒ ಮುಖಂಡರು ತಿಳಿಸಿದ್ದಾರೆ.
ಪ್ರತಿಭಟನಾಕಾರರೊಂದಿಗೆ ಅರ್ಥಪೂರ್ಣ ಸಂವಾದ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು, ಅವರನ್ನು ಬಲವಂತವಾಗಿ ತೆರವುಗೊಳಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ನಡೆ. ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಚದುರಿಸಲು ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಿರುವ ಕ್ರಮವೂ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಪ್ರತಿಭಟನೆಕಾರರು ಹೇಳಿದ್ದಾರೆ.
ದೇಶದ ಯುವಜನತೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ, ಪ್ರಜಾಪ್ರಭುತ್ವದ ಹಕ್ಕುಗಳ ರಕ್ಷಣೆ ಹಾಗೂ ಸಾರ್ವಜನಿಕ ಹಿತಾಸಕ್ತಿಗಾಗಿ ಸಂಘಟಿತ ಹೋರಾಟ ನಡೆಸಬೇಕು ಎಂದು ಪ್ರತಿಭಟನೆಕಾರರು ಕರೆ ನೀಡಿದ್ದಾರೆ.
ಸಿದ್ದಲಿಂಗ ಬಾಗೇವಾಡಿ, ಗೀತಾ, ಸುರೇಶ ಜೆ.ಬಿ, ಲಕ್ಷ್ಮಣ ಹಂದ್ರಾಳ, ಪ್ರಭುಗೌಡ ಪಾಟೀಲ್, ಅಕ್ರಂ ಮಾಶ್ಯಾಳಕರ ಮತ್ತಿತರ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Share this