ದಲಿತಪರ ಸರ್ಕಾರದಲ್ಲಿ ದಲಿತರ ಮೇಲೆ ದೌರ್ಜನ್ಯ ಹೆಚ್ಚಳ: ಶ್ರೀಶೈಲ ಛಲವಾದಿ ಆಕ್ರೋಶ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 26:
ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿದ್ದು, ದಲಿತಪರ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ದೌರ್ಜನ್ಯ ಎಸಗುವವರಿಗೆ ಮುಕ್ತ ಅವಕಾಶ ನೀಡಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶ್ರೀಶೈಲ ಛಲವಾದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದಲ್ಲಿ 2 ಸಾವಿರಕ್ಕೂ ಅಧಿಕ ದಲಿತ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಆರೋಪಿಸಿದ್ದಾರೆ. ಈ ಅವಧಿಯಲ್ಲಿ 19 ದಲಿತರ ಕೊಲೆ ನಡೆದಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಸುಮಾರು ನಾಲ್ಕು ದಲಿತರ ಕೊಲೆ ಪ್ರಕರಣಗಳು ನಡೆದಿವೆ. ಮಧುಗಿರಿ ತಾಲೂಕಿನಲ್ಲಿಯೂ ನಾಲ್ಕು ಕೊಲೆಗಳು ನಡೆದಿದ್ದು, ಗಣೇಶ ವಿಸರ್ಜನೆ ಸಂದರ್ಭದಲ್ಲಿ ನೃತ್ಯ ಮಾಡಿದ ನೆಪದಲ್ಲಿ ಯುವಕರ ಎದೆಗೆ ಇರಿದು ಕೊಲೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಇಂತಹ ಘಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಸ್ಥಳೀಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರು ದಲಿತ ಸಮುದಾಯಕ್ಕೆ ಸೇರಿದವರಾಗಿರುವುದು ಗಮನಾರ್ಹ ಎಂದು ಹೇಳಿದ್ದಾರೆ.
ಕನಕಪುರ ಹಾಗೂ ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆ ಗಣೇಶೋತ್ಸವದ ಸಂದರ್ಭದಲ್ಲಿ ದಲಿತರ ಮೇಲೆ ಹಲ್ಲೆ ನಡೆದಿರುವ ಘಟನೆಗಳು ವರದಿಯಾಗಿವೆ. ರಾಜ್ಯದಲ್ಲಿ ಜಾತಿ ಆಧಾರಿತ ದೌರ್ಜನ್ಯಗಳು ಹೆಚ್ಚಾಗುತ್ತಿದ್ದರೂ ಪ್ರಗತಿಪರರು, ಬುದ್ಧಿಜೀವಿಗಳು ಹಾಗೂ ಹಿರಿಯ ದಲಿತ ನಾಯಕರು ಮೌನ ವಹಿಸಿರುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.
ರಾಜಕಾರಣಿಯೊಬ್ಬರು ಯಾವುದೋ ಸಣ್ಣ ಹೇಳಿಕೆ ನೀಡಿದರೆ ತೀವ್ರ ಹೋರಾಟ ನಡೆಸುವವರು, ದಲಿತರ ಮೇಲೆ ಅತ್ಯಾಚಾರ, ಕೊಲೆ ಹಾಗೂ ಮನೆಗಳಿಗೆ ಬೆಂಕಿ ಹಚ್ಚುವಂತಹ ಗಂಭೀರ ಘಟನೆಗಳ ಬಗ್ಗೆ ಏಕೆ ಧ್ವನಿ ಎತ್ತುತ್ತಿಲ್ಲ? ಇಂತಹ ಘಟನೆಗಳು ಅವರ ಕಣ್ಣಿಗೆ ಕಾಣಿಸುತ್ತಿಲ್ಲವೇ ಎಂದು ಶ್ರೀಶೈಲ ಛಲವಾದಿ ಪ್ರಶ್ನಿಸಿದ್ದಾರೆ.
ಗೃಹ ಸಚಿವರು ಹಾಗೂ ಸಮಾಜ ಕಲ್ಯಾಣ ಸಚಿವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಕಾಂಗ್ರೆಸ್ ಸರ್ಕಾರ ದಲಿತರ ಪರವಾಗಿದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ದಲಿತರ ಮೇಲಿನ ದೌರ್ಜನ್ಯ ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಅವರು, ಪ್ರಕರಣಗಳಲ್ಲಿ ತ್ವರಿತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಹಾಗೂ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ದಲಿತರು ಭಯಮುಕ್ತವಾಗಿ ಬದುಕುವ ವಾತಾವರಣ ನಿರ್ಮಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ದೌರ್ಜನ್ಯ ಪ್ರಕರಣಗಳನ್ನು ರಾಜಕೀಯ ಭೇದಭಾವವಿಲ್ಲದೆ ಗಂಭೀರವಾಗಿ ಪರಿಗಣಿಸಿ, ಕಾನೂನು ಸುವ್ಯವಸ್ಥೆ ಬಲಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Share this