ರಾಜ್ಯ ಸರ್ಕಾರದ ವಿರುದ್ಧ ಕಿಡಿ | ರೈತರ ಸಮಸ್ಯೆ ಪರಿಹರಿಸದೆ ಹೋರಾಟದ ಬಗ್ಗೆ ಮೊಸಳೆ ಕಣ್ಣೀರು ಬೇಡ
ಸಪ್ತಸಾಗರ ವಾರ್ತೆ,ವಿಜಯಪುರ, ಅ. 15:
ಕಬ್ಬು ಬೆಳೆಗಾರರು ಎದುರಿಸುತ್ತಿರುವ ತೂಕ, ರಿಕವರಿ ಹಾಗೂ ಕಟಾವು ಸೇರಿದಂತೆ ವಿವಿಧ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕು. ರೈತರ ನ್ಯಾಯಯುತ ಬೇಡಿಕೆಗಳ ಪೈಕಿ ಶೇ.70ರಷ್ಟು ಬೇಡಿಕೆಗಳನ್ನು ರಾಜ್ಯ ಸರ್ಕಾರವೇ ಈಡೇರಿಸಬೇಕಿದ್ದು, ಸಮಸ್ಯೆಗಳನ್ನು ಬಗೆಹರಿಸದೆ ರೈತರ ಹೋರಾಟದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವುದು ಸರಿಯಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬಿನ ತೂಕ ಮತ್ತು ರಿಕವರಿಯಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಹಲವು ಬಾರಿ ಬೆಳಕು ಚೆಲ್ಲಲಾಗಿದೆ. ಈ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವ ಹೊಣೆ ರಾಜ್ಯ ಸರ್ಕಾರದ್ದಾಗಿದೆ. ಆದರೆ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಕಬ್ಬು ಬೆಳೆಗಾರರು ತಮ್ಮ ಮೂಲಭೂತ ಸಮಸ್ಯೆಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಮೇಶ ಚಾಂದ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಿರುವುದು ಮಹತ್ವದ ಹೆಜ್ಜೆಯಾಗಿದೆ. ಸಮಿತಿಯು ಎಂಎಸ್ಪಿ ಪರಿಷ್ಕರಣೆ ಸೇರಿದಂತೆ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಲಿದೆ ಎಂದರು.
ಕಬ್ಬು ಬೆಳೆಗಾರರ ಹೋರಾಟ ನ್ಯಾಯಯುತವಾಗಿದ್ದು, ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ಅಗತ್ಯಬಿದ್ದರೆ ಹೋರಾಟಕ್ಕೆ ಕೈಜೋಡಿಸಿ ಇನ್ನಷ್ಟು ಶಕ್ತಿ ತುಂಬಲು ಪಕ್ಷ ಸಿದ್ಧವಿದೆ ಎಂದು ನಡಹಳ್ಳಿ ಹೇಳಿದರು.
ಕಬ್ಬು ಬೆಳೆಗಾರರು, ಗ್ರಾಹಕರು, ಸಕ್ಕರೆ ಉದ್ಯಮ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಸಮಸ್ಯೆಗಳಿಗೆ ಸಮಗ್ರ ಪರಿಹಾರ ಕಂಡುಕೊಳ್ಳಬೇಕಿದೆ. ರೈತರು ಪದೇಪದೇ ಬೀದಿಗಿಳಿದು ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದು ಬಿಜೆಪಿಯ ನಿಲುವಾಗಿದೆ ಎಂದರು.
ಕಬ್ಬನ್ನು ಕೇವಲ ಸಕ್ಕರೆ ಉತ್ಪಾದನೆಗೆ ಸೀಮಿತಗೊಳಿಸದೆ, ಎಥೆನಾಲ್ ಸೇರಿದಂತೆ ವಿವಿಧ ಉತ್ಪನ್ನಗಳ ತಯಾರಿಕೆಗೆ ಬಳಸುವ ಮೂಲಕ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಅವರು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


