ಸಪ್ತಸಾಗರ ವಾರ್ತೆ, ವಿಜಯಪುರ,ಜ.8 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ (ಜನವರಿ 7) ಹಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರದ ಬಹುದಿನಗಳ ಕನಸಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವ ಬಗ್ಗೆ ಘೋಷಣೆ ಮಾಡಿರುವುದನ್ನು ದಲಿತ ವಿದ್ಯಾರ್ಥಿ ಪರಿಷತ್ ಸ್ವಾಗತಿಸಿ ಗುರುವಾರ ಸಂಭ್ರಮಾಚರಣೆ ಮಾಡಿತು.
ಮುಖ್ಯಮಂತ್ರಿಗಳು ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಾಡುವ ಬಗ್ಗೆ ಘೋಷಿಸಿದ ಹಿನ್ನೆಲೆಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಅಂಬೇಡ್ಕರ್ ಸರ್ಕಲ್ ಬಳಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಈ ವೇಳೆ ಮಾತನಾಡಿದ ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯಕುಮಾರ ಅಜಮನಿ, ಜಿಲ್ಲೆಯ ಎಲ್ಲ ಪ್ರಗತಿಪರ ಸಂಘಟನೆಗಳ ಮತ್ತು ಹೋರಾಟಗಾರರ ಹಾಗೂ ವಿದ್ಯಾರ್ಥಿ ಯುವಜನರ ಹೋರಾಟದ ಪ್ರತಿಫಲವಾಗಿ ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲು ಘೋಷಣೆ ಆಗಿದ್ದು ಸ್ವಾಗತಾರ್ಹ. ಹೋರಾಟಗಾರರ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು. ಆದಷ್ಟು ಬೇಗನೆ ಕಾಲೇಜು ಶಂಕು ಸ್ಥಾಪನೆಯಾಗಬೇಕು. ಈ ಕುರಿತು ಮುಖ್ಯಮಂತ್ರಿಗಳು ಗಮನ ಹರಿಸಬೇಕು. ಜೊತೆಗೆ ಮೆಡಿಕಲ್ ಕಾಲೇಜು ಸ್ಥಾಪನೆಗೆ ಹೋರಾಡಿ ಜೈಲಿಗೆ ಹೋದ ಹೋರಾಟಗಾರರನ್ನು ಆದಷ್ಟು ಬೇಗನೆ ಬಿಡುಗಡೆಗೊಳಿಸಬೇಕೆಂದು ಅಗ್ರಹಿಸಿದರು.
ಇದೇ ವೇಳೆ ಮಾತನಾಡಿದ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷ ಮಹಾದೇವ ಚಲವಾದಿ, ಜಿಲ್ಲೆಯ ವಿದ್ಯಾರ್ಥಿ ಯುವಜನರ ಬಹುದಿನಗಳ ಬೇಡಿಕೆಯಾಗಿರುವ ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು, ಸ್ಥಾಪನೆ ಮಾಡುತ್ತೇವೆ ಎಂದು ಘೋಷಣೆ ಮಾಡಿದ ಮುಖ್ಯಮಂತ್ರಿಗಳಿಗೆ ಹಾಗೂ ಈ ಬಗ್ಗೆ ಶ್ರಮಿಸಿದ ಜಿಲ್ಲೆಯ ಜನಪ್ರತಿನಿಧಿಗಳಿಗೆ ಧನ್ಯವಾದಗಳು. ಘೋಷಣೆ ಬರೆ ಘೋಷಣೆಯಾಗಿ ಉಳಿಯದೆ, ಆದಷ್ಟು ಬೇಗನೆ ಶಂಕು ಸ್ಥಾಪನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಕಾಲೇಜನ್ನು ಉದ್ಘಾಟಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪ್ರತಾಪ್, ಸಾಯಬಣ್ಣ, ಭೀಮು, ಹುಚ್ಚಪ್ಪ, ಯಾಸಿನ್, ಆದಿತ್ಯ, ನಿಂಗಣ್ಣ, ಮಂಜು, ಪ್ರವೀಣ, ಆಕಾಶ ಮತ್ತಿತರರು ಉಪಸ್ಥಿತರಿದ್ದರು.
ಸಿಎಂ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆ : ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಸಂಭ್ರಮಾಚರಣೆ


