ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗಿ- ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 25:
ಮಕ್ಕಳ ರಕ್ಷಣೆ ಮತ್ತು ಅವರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಮಕ್ಕಳ ರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಹೇಳಿದರು.
ಮಕ್ಕಳ ನಿರ್ದೇಶನಾಲಯ ಬೆಂಗಳೂರು, ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಭಾಗಿದಾರ ಇಲಾಖೆಗಳು, ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಆರ್‍ಟಿಇ-2009 ಪೋಕ್ಸೋ-2012 ಹಾಗೂ ಬಾಲ ನ್ಯಾಯ ಕಾಯ್ದೆ 2015 ಅನುಷ್ಠಾನ ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾರ್ಯಕ್ರಮ-ಯೋಜನೆಗಳ ಕುರಿತು ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇರುವ ಕಾಯ್ದೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ-1098 ಎದ್ದು ಕಾಣುವಂತೆ ಮಾಹಿತಿ ಫಲಕ ಅಳವಡಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಕ್ಕಳ ಸಭೆ ನಡೆಸಿ ನಡಾವಳಿಯನ್ನು ನಿರ್ವಹಿಸಬೇಕು. ಬಾಲ್ಯವಿವಾಹ, ಅಪೌಷ್ಠಿಕತೆ, ಬಾಲಕಾರ್ಮಿಕ ಪದ್ಧತಿ ಇಂತಹ ವಿಷಯಗಳಲ್ಲಿ ಮಕ್ಕಳಿಗೆ ಮತ್ತು ಪಾಲಕರಿಗೆ ಜಾಗೃತಿ ಮೂಡಿಸಬೇಕು. ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿ ಕಾಲಕಾಲಕ್ಕೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ನಡೆಸುವಂತೆ ಅವರು ಸೂಚನೆ ನೀಡಿದರು.
ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎಂಬುದು ಪತ್ರ ವ್ಯವಹಾರದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬಾಲ್ಯ ವಿವಾಹ ಕುರಿತು ಜಾಗೃತಿ ಮೂಡಿಸಬೇಕು. ವಿಶೇಷವಾಗಿ ವೈದ್ಯಕೀಯ ಚೀಟಿಯಲ್ಲಿ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಕುರಿತು ಬಳಸುವಂತೆ ಒತ್ತು ನೀಡಬೇಕು. ಅನಿಮಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಈಗಾಗಲೇ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಕುರಿತು ವ್ಯಾಪಕವಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಅಪೌಷ್ಠಿಕತೆ, ತಾಯಿ-ಮಕ್ಕಳ ಮರಣ ಪ್ರಮಾಣ, ಪ್ರಸವಪೂರ್ವ ಭ್ರೂಣ ಪತ್ತೆ ನಿಷೇಧ ಕಾಯ್ದೆಯನ್ನು ಜಿಲ್ಲೆಯಲ್ಲಿ ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕಾಲಕಾಲಕ್ಕೆ ಸ್ಕ್ಯಾನಿಂಗ್ ಸೆಂಟರ್‍ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿಗಳ ಕೇಂದ್ರಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಅವಶ್ಯ ಇರುವ ಕಡೆ ಮೂಲಭೂತ ಸೌಲಭ್ಯ, ಕಂಪೌಂಡ್ ಗೋಡೆ, ಶೌಚಾಲಯ ನಿರ್ಮಾಣಕ್ಕೆ ಕ್ರಮ ವಹಿಸಿ, ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅವರು ಸೂಚನೆ ನೀಡಿದರು.
ಬಾಲ್ಯ ವಿವಾಹಗಳು ಜಿಲ್ಲೆಯಲ್ಲಿ ನಡೆಯದಂತೆ ತಡೆಯಲು ಗ್ರಾಮ ಮಟ್ಟದಲ್ಲಿನ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಸಂಬಂಧಿಸಿದ ಇಲಾಖೆಗಳು, ಸಾರ್ವಜನಿಕರ ಸಹಭಾಗಿತ್ವದಲ್ಲಿ ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ಬಾಲ್ಯವಿವಾಹಗಳು ನಡೆಯದಂತೆ ಅಗತ್ಯ ಕ್ರಮ ವಹಿಸಲು ಅವರು ಸೂಚನೆ ನೀಡಿದರು.
ತಾಲೂಕಾ ಮಟ್ಟದಲ್ಲಿ ತಾಲೂಕಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಮತ್ತು ತಹಶೀಲ್ದಾರಗಳ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದ್ದು, ಕಾಲಕಾಲಕ್ಕೆ ಸಭೆ ನಡೆಸಿ ಬಾಲ್ಯ ವಿವಾಹ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಒಂದು ವಾರಕ್ಕಿಂತ ಹೆಚ್ಚಿನ ಅವಧಿಗೆ ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಕಲೆ ಹಾಕಿ ಈ ಕುರಿತು ಪಾಲಕರಿಗೆ ತಿಳುವಳಿಕೆ ನೀಡಿ ಮರಳಿ ಮಕ್ಕಳಿಗೆ ಶಾಲೆಗೆ ಕರೆತರಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಮಕ್ಕಳ ರಕ್ಷಣಾ ನೀತಿ-2016ಯನ್ವಯ ಕ್ರಮ ವಹಿಸಿ ಮಕ್ಕಳಿಗಿರುವ ಹಕ್ಕನ್ನು ರಕ್ಷಿಸಿ ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಈ ನೀತಿಯಲ್ಲಿರುವ ಅಂಶಗಳನ್ನು ಪಾಲನೆಯಾಗುತ್ತಿರುವ ಕುರಿತು ಅಧಿಕಾರಿಗಳು ಗಮನ ಹರಿಸಬೇಕು. ಮಕ್ಕಳ ಕಾಯ್ದೆ ಕುರಿತು ಅರಿವು ಮೂಡಿಸಬೇಕು. ವಿವಿಧ ವಸತಿ ನಿಲಯ, ವಸತಿ ಶಾಲೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಕಾಲಕಾಲಕ್ಕೆ ಭೇಟಿ ನೀಡಿ ನಿಲಯಗಳಲ್ಲಿ ಮಕ್ಕಳಿಗೆ ಕಲ್ಪಿಸಲಾಗುತ್ತಿರುವ ಆಹಾರ, ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಿ ಮಕ್ಕಳ ಹಕ್ಕು ರಕ್ಷಣೆಗೆ ಮುಂದಾಗಬೇಕು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕಾಲಕಾಲಕ್ಕೆ ಸಭೆಗಳನ್ನು ನಡೆಸಿ ಸೂಕ್ತ ಸೂಚನೆಗಳನ್ನು ನೀಡಲಾಗಿದೆ. ಶಿಕ್ಷಣ, ಆರೋಗ್ಯ, ಪೋಲಿಸ್ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯಿಂದ ವರ್ಷಪೂರ್ತಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ತಿಳುವಳಿಕೆ ನೀಡಲಾಗುತ್ತಿದೆ ಎಂದು ಹೇಳಿದರು.
ಪ್ರತಿ ಶಾಲಾ ಕಾಲೇಜ್‍ಗಳಲ್ಲಿ ಅರಿವು ಮೂಡಿಸಲು ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಬಾಲ್ಯವಿವಾಹ, ಬಾಲಕಾರ್ಮಿಕ, ಮಕ್ಕಳಲ್ಲಿರುವ ಅಪೌಷ್ಠಿಕತೆ, ಅನಿಮಿಯಾ, ಶಾಲೆ ಬಿಟ್ಟ ಮಕ್ಕಳು ಸೇರಿದಂತೆ ಸಮಗ್ರ ಮಾಹಿತಿ ಪಡೆದು, ರೂಪರೇಷೆ ಸಿದ್ಧಪಡಿಸಿಕೊಂಡು ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸಲಾತ್ತಿದ್ದು, ಮಕ್ಕಳ ರಕ್ಷಣೆಗಾಗಿ ಆಯೋಗ ನೀಡಿರುವ ಸಲಹೆ-ಸೂಚನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಪಂಚಾಯತ್ ರಾಜ್ ಇಲಾಖೆಯು ಮಕ್ಕಳ ಹಿತದೃಷ್ಟಿಯಿಂದ ಆರೋಗ್ಯ, ಶಿಕ್ಷಣ ಭವಿಷ್ಯ ಇದನ್ನರಿತು ಮಕ್ಕಳ ಸ್ನೇಹಿಯಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ. ಮಕ್ಕಳ ಓದಿಗಾಗಿ ಗ್ರಾಮ ಪಂಚಾಯತ್ ಕರ ವಸೂಲಾತಿಯನ್ನು ಬಳಸಿಕೊಂಡು ಮಕ್ಕಳಿಗಾಗಿ ಗ್ರಂಥಾಲಯ ಸೇರಿದಂತೆ ಮಕ್ಕಳಿಗೆ ಪೂರಕ ಚಟವಟಿಕೆ, ವಾತಾವರಣ ನಿರ್ಮಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಆಯೋಗದ ಸದಸ್ಯರುಗಳಾದ ಶೇಖರಗೌಡ ರಾಮತ್ನಾಳ, ಶಶಿಧರ ಕೋಸಂಬೆ, ಡಾ.ಕೆ.ಟಿ. ತಿಪ್ಪೇಸ್ವಾಮಿ, ಮಂಜು ವೆಂಕಟೇಶ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಡಿವೈಎಸ್‍ಪಿ ಬಸವರಾಜ ಯಲಿಗಾರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ ಸೌದಾಗರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದೀಪಾಕ್ಷಿ ಜಾನಕಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Share