ಸಪ್ತಸಾಗರ ವಾರ್ತೆ ಆಲದಕಟ್ಟಿ (ಹಾನಗಲ್)ಅ. 31 : ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ನೀಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದೆ. ಜೊತೆಗೆ ಕಂದಾಯ ಗ್ರಾಮಗಳನ್ನು ರೂಪಿಸಿ ಜನಾಶಯದಂತೆ ಹಕ್ಕುಪತ್ರ ವಿತರಿಸುವ ಮೂಲಕ ಬದ್ಧತೆ ಮೆರೆದಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಹೊಂದಿರುವ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ತಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.
ಶುಕ್ರವಾರ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಆಲದಕಟ್ಟಿ ಹಾಗೂ ಮಾರಿಮಿಡ್ಡಿ ಗ್ರಾ.ಪಂ. ವ್ಯಾಪ್ತಿಯ ಹಳ್ಳಿಗಳ ಕಂದಾಯ ಗ್ರಾಮಗಳು ಹಾಗೂ ಉಪ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ, ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಕೇಂದ್ರ-ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುತ್ತದೆ ಎಂಬುದಕ್ಕೆ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದರೆ, ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಬಡ ಕುಟುಂಬಗಳಿಗೆ ಅನ್ನಭಾಗ್ಯದ ಮೂಲಕ ಉಚಿತ ಅಕ್ಕಿ ಹಾಗೂ ಇತರೆ ಆಹಾರ ಧಾನ್ಯ ವಿತರಿಸುತ್ತಿದೆ.ಇಂದಿರಾ ಕ್ಯಾಂಟೀನ್ ಮೂಲಕ ನಗರ ಪ್ರದೇಶದ ಬಡವರ ಹಸಿವು ನೀಗಲು ಮುಂದಾಗಿರುವುದೇ ಇದಕ್ಕೆ ಸಾಕ್ಷಿ ಎಂದರು.
ಪಂಚ ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಕಂದಾಯ ಗ್ರಾಮಗಳನ್ನು ರೂಪಿಸಿ ಹಕ್ಕುಪತ್ರ ವಿತರಿಸುವ ಕ್ರಾಂತಿಕಾರಕ ಹೆಜ್ಜೆ ಇರಿಸಿರುವುದು ನಮ್ಮ ಸರ್ಕಾರದ ರಾಜಕೀಯ ಇಚ್ಛಾಶಕ್ತಿಗೆ ಸಾಕ್ಷಿ. ಈ ಸೌಲಭ್ಯ ಪಡೆಯುವಲ್ಲಿ ಹಾವೇರಿ ಜಿಲ್ಕೆಯ ಹಾನಗಲ್ ಮುಂಚೂಣಿಯಲ್ಲಿ ಎಂಬುದು ಜಿಲ್ಲೆಯ ಅಧಿಕಾರಿಗಳ ಕಾರ್ಯಕ್ಷಮತೆಗೆ ಸಾಕ್ಷಿ ಎಂದರು.
ಇದಲ್ಲದೇ ಹಾವೇರಿ ಜಿಲ್ಲೆಯಲ್ಲೂ ಗ್ಯಾರಂಟಿ ಯೋಜನೆ ಅನುಷ್ಠಾನದ ಜೊತೆಗೆ ಹಾಗೂ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದೇವೆ. ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿದ್ದ ಹಾವೇರಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ವಂತ ಕಟ್ಟಡದಲ್ಲಿ ಆರಂಭಿಸಿರುವುದು ಜನತೆಯ ಮುಂದಿದೆ. ಎಂ.ಎಸ್. ಹಾಗೂ ಎಂ.ಡಿ. ಶೈಕ್ಷಣಿಕ ಓದಿಗೆ ಅವಕಾಶ ಕಲ್ಪಿಸಿದೆ ಎಂದು ವಿವರಿಸಿದರು.
ಭವಿಷ್ಯದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳನ್ನು ಕರೆಸಿ ಹಾವೇರಿ ಜಿಲ್ಲೆಯಲ್ಲಿ ಇನ್ನೂ 30 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವುದಾಗಿ ಸಚಿವರು ಭರವಸೆ ನೀಡಿದರು.
ಈ ಭಾಗದಲ್ಲಿ ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಮೂಲಕ 400 ಹಳ್ಳಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಹೀಗೆ ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ. ಅಧ್ಯಕ್ಷೆ ಮಾಳವ್ಬ ಸುರೇಶ ದಸೂರ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ. ಸಿಇಒ ರುಚಿ ಬಿಂದಾಲ, ಎಸ್ಪಿ ಯಶೋಧ ವಂಟಗೋಡಿ, ಸಹಾಯಕ ಆಯುಕ್ತ ಶುಭಂ ಶುಕ್ಲ, ಉಮೇಶ, ಕೊಟ್ರಪ್ಪ, ಚಂದ್ರಪ್ಪ, ಸೇರಿದಂತೆ ಇತರರು ಉಪಸ್ಥಿತರಿದ್ದರು.
ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ : ಸಚಿವ ಶಿವಾನಂದ ಪಾಟೀಲ


