ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸಭೆ: ರಾಜ್ಯ ನಾಯಕರಿಗೆ ವರದಿ ಸಲ್ಲಿಕೆ – ಡಾ. ಅಂಜಲಿ ಲಿಂಬಾಳ್ಕರ್

ಸಪ್ತಸಾಗರ ವಾರ್ತೆ,ವಿಜಯಪುರ, ಜು.18:
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಎಐಸಿಸಿ ಕಾರ್ಯದರ್ಶಿ, ಮಾಜಿ ಶಾಸಕಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗೀಯ ಎಸ್‌ಐಆರ್ ವೀಕ್ಷಕಿ ಡಾ. ಅಂಜಲಿ ಲಿಂಬಾಳ್ಕರ್ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ನೇತೃತ್ವದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಕ್ಷೇತ್ರಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ವೇಳೆ ಎದುರಾಗುತ್ತಿರುವ ಸಮಸ್ಯೆಗಳನ್ನು ವಿವರಿಸಿದರು. ಹಲವೆಡೆ ಬಿಎಲ್‌ಒಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಅಂಗನವಾಡಿ ಕಾರ್ಯಕರ್ತರನ್ನು ಬಿಎಲ್‌ಒಗಳಾಗಿ ನಿಯೋಜಿಸಿರುವುದರಿಂದ ಅವರಿಗೆ ಸಮರ್ಪಕ ತರಬೇತಿ ಮತ್ತು ಮಾಹಿತಿ ಕೊರತೆಯಿದ್ದು, ಕೆಲಸದಲ್ಲಿ ಗೊಂದಲ ಉಂಟಾಗಿದೆ ಎಂದು ದೂರಿದರು.
ವಿಶೇಷವಾಗಿ ವಿಜಯಪುರ ನಗರ ಕ್ಷೇತ್ರದಲ್ಲಿ ಕೆಲ ಬಿಎಲ್‌ಒಗಳು ತಮ್ಮ ಜವಾಬ್ದಾರಿಯನ್ನು ಇತರರಿಗೆ ವಹಿಸುತ್ತಿದ್ದು, ಇದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಪಾರದರ್ಶಕವಾಗಿ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಎಲ್‌ಎ-2ಗಳಿಗೆ ಸೂಕ್ತ ಗೌರವ ಮತ್ತು ಸಹಕಾರ ಸಿಗುತ್ತಿಲ್ಲ. ಜನರು ತಮ್ಮ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರನ್ನೇ ಪ್ರಶ್ನಿಸುತ್ತಿದ್ದಾರೆ ಎಂದು ಬ್ಲಾಕ್ ಅಧ್ಯಕ್ಷರು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ಮಾತನಾಡಿ, ಕಳೆದ ಆರು ದಿನಗಳಿಂದ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರೊಂದಿಗೆ ಜಿಲ್ಲೆಯ ಎಲ್ಲ ಬ್ಲಾಕ್‌ಗಳಲ್ಲಿ ಸಭೆ ನಡೆಸಿ ಬಿಎಲ್‌ಎ-2ಗಳಿಗೆ ಎಸ್‌ಐಆರ್ ಕುರಿತು ಮಾಹಿತಿ ನೀಡಲಾಗಿದೆ. ಇದೀಗ ಬ್ಲಾಕ್ ಅಧ್ಯಕ್ಷರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಪಕ್ಷದ ರಾಜ್ಯ ನಾಯಕತ್ವದ ಗಮನಕ್ಕೆ ತಂದು ಕಾರ್ಯಕರ್ತರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸುವಂತೆ ವೀಕ್ಷಕರಿಗೆ ಮನವಿ ಮಾಡಿದರು.
ಡಾ. ಅಂಜಲಿ ಲಿಂಬಾಳ್ಕರ್ ಮಾತನಾಡಿ, ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರು ಹಾಗೂ ಮುಖಂಡರು ಮಂಡಿಸಿರುವ ಅಹವಾಲುಗಳನ್ನು ಗಮನವಿಟ್ಟು ಆಲಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿ ಹಾಗೂ ಯಾವುದೇ ಮತದಾರರಿಗೆ ಅನ್ಯಾಯವಾಗದ ರೀತಿಯಲ್ಲಿ ನಡೆಯಬೇಕು. ಬಿಎಲ್‌ಒಗಳ ಕಾರ್ಯವೈಖರಿ, ಬಿಎಲ್‌ಎ-2ಗಳಿಗೆ ಸಹಕಾರದ ಕೊರತೆ ಹಾಗೂ ಮತದಾರರಿಗೆ ಆಗುತ್ತಿರುವ ತೊಂದರೆಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಕೆಪಿಸಿಸಿ ರಾಜ್ಯಾಧ್ಯಕ್ಷರಿಗೆ ಸಲ್ಲಿಸಲಾಗುವುದು. ಪಕ್ಷದ ಕಾರ್ಯಕರ್ತರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮತದಾರರ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ 2023ರ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್, ವಿಡಿಎ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹ್ಮದ್ ರಫೀಕ್ ಟಪಾಲ ಹಾಗೂ ಅಬ್ದುಲ್ ರಜಾಕ್ ಹೊರ್ತಿ, ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ (ಗಣಿಹಾರ), ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಸೇರಿದಂತೆ ಹಲವು ಮುಖಂಡರು ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು, ಬಿಎಲ್‌ಒಗಳು ನಿಯಮಾನುಸಾರ ಕಾರ್ಯನಿರ್ವಹಿಸಬೇಕು ಹಾಗೂ ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್, ವಿವಿಧ ಅಂಗ ಘಟಕಗಳ ಅಧ್ಯಕ್ಷರು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Share this