ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 1: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಖಂಡಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮತ್ತು ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಲಾಯಿತು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹಾಲ್ದ್ವಾನಿ ರ‍್ಯಾಲಿ ಬಳಿಕ ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ನಡೆಸಿದ ರ‍್ಯಾಲಿಯಲ್ಲಿ ಅತ್ಯಂತ ಕೀಳುಮಟ್ಟದ ಭಾಷೆ ಬಳಸಿರುವ ಕುರಿತು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದರು.
ಆದರೆ, ಸಂವಿಧಾನಿಕ ಮೌಲ್ಯಗಳಿಗೆ ಅವಮಾನ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಬಿಜೆಪಿ ರಾಜ್ಯ ಸರ್ಕಾರದ ಪ್ರಚೋದನೆಯಿಂದ ಕಾರ್ಯನಿರ್ವಹಿಸುತ್ತಿರುವ ಉತ್ತರಾಖಂಡ ಪೊಲೀಸರು ರಾಹುಲ್ ಗಾಂಧಿ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ
ಜಾತಿವಾದಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಲೋಕಸಭೆ ವಿರೋಧ ಪಕ್ಷದ ನಾಯಕನ ವಿರುದ್ಧ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಪ್ರಕರಣ ದಾಖಲಿಸಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಕೇಂದ್ರ ಸರ್ಕಾರದ ಪ್ರತೀಕಾರದ ರಾಜಕಾರಣದ ಭಾಗವಾಗಿದೆ. ಉತ್ತರಾಖಂಡದಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನ್ನು ತಕ್ಷಣ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.
ಇದು ರಾಜಕೀಯ ಪ್ರೇರಿತ ಹಾಗೂ ಉದ್ದೇಶಪೂರ್ವಕವಾಗಿ ಗುರಿಯಾಗಿಸುವ ಕ್ರಮವಾಗಿದೆ. ವಿರೋಧ ಪಕ್ಷದ ಧ್ವನಿಯನ್ನು ಅಡಗಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಆರೋಪಿಸಿದರು.
ನ್ಯಾಯಾಂಗ ವ್ಯವಸ್ಥೆಯ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಈ ವಿಚಾರದಲ್ಲಿ ಕಾನೂನುಬದ್ಧವಾಗಿ ಹೋರಾಟ ನಡೆಸುತ್ತೇವೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕಧೊಂಡ, ಮಾಜಿ ಶಾಸಕ ರಾಜು ಆಲಗೂರು, ಮಹ್ಮದ್ ರಫೀಕ್ ಟಪಾಲ್, ಡಾ. ಪ್ರಭುಗೌಡ ಲಿಂಗದಳ್ಳಿ, ಚಾಂದಸಾಬ ಗಡಗಲಾವ, ಸುಭಾಷ ಕಾಲೇಬಾಗ, ಅಬ್ದುಲ್ ರಜಾಕ ಹೊರ್ತಿ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


