ಕಾವೇರಿ ಜಲವಿವಾದಕ್ಕೆ ಶಾಶ್ವತ ಪರಿಹಾರ ನೀಡಿ : ಆಲಮಟ್ಟಿ ಎತ್ತರ ಹೆಚ್ಚಳ, ಮಹಾದಾಯಿ ಯೋಜನೆ ತ್ವರಿತಗೊಳಿಸಲು ರೈತ ಭಾರತ ಪಕ್ಷ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.14:
ಕಾವೇರಿ ಜಲವಿವಾದವನ್ನು ಶೀಘ್ರವಾಗಿ ಇತ್ಯರ್ಥಪಡಿಸಿ ರಾಜ್ಯದ ರೈತರ ಹಿತ ಕಾಪಾಡಬೇಕು. ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕಾಮಗಾರಿಗೆ ವೇಗ ನೀಡುವುದರೊಂದಿಗೆ ಕಳಸಾ-ಬಂಡೂರಿ ಮಹಾದಾಯಿ ಯೋಜನೆಯನ್ನು ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿರುವ ಅವರು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶ ಹಾಗೂ ಅದನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿರುವ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾವೇರಿ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡಲಿ:

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಯಾವುದೇ ನಿರ್ದಿಷ್ಟ ತೀರ್ಪು ನೀಡದಿರುವ ಸಂದರ್ಭದಲ್ಲಿ ಸಂಕಷ್ಟ ಸೂತ್ರ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರದ ಮುಂದೆ ಸೂಕ್ತ ಒತ್ತಡ ಹೇರಬೇಕಿತ್ತು. ಆದರೆ ಈ ವಿಚಾರದಲ್ಲಿ ರಾಜ್ಯ ಸರ್ಕಾರ ಸ್ಪಷ್ಟ ಹಾಗೂ ಪರಿಣಾಮಕಾರಿ ನಿಲುವು ತಳೆಯಬೇಕು ಎಂದು ಕೆಂಗನಾಳ ಒತ್ತಾಯಿಸಿದ್ದಾರೆ.
ನೀರಿನ ವಿಚಾರದಲ್ಲಿ ತಮಿಳುನಾಡು ಕರ್ನಾಟಕಕ್ಕಿಂತ ಮುಂಚಿತವಾಗಿ ಸಿದ್ಧತೆ ನಡೆಸುತ್ತಿದೆ. ರಾಜ್ಯ ಸರ್ಕಾರ ದೂರದೃಷ್ಟಿ ಹಾಗೂ ಮುನ್ನೆಚ್ಚರಿಕೆಯಿಂದ ಕ್ರಮ ಕೈಗೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವುದನ್ನು ಬಿಟ್ಟು ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಕೃಷ್ಣಾ ನದಿಗೂ ಸಮಾನ ಆದ್ಯತೆ:

ರಾಜ್ಯದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನದಿ ಜೋಡಣೆ ಯೋಜನೆಗಳಿಗೆ ಸರ್ಕಾರ ಆದ್ಯತೆ ನೀಡಬೇಕು. ಕೃಷ್ಣಾ ನದಿ ನೀರಿನ ಸದ್ಬಳಕೆ ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಹೆಚ್ಚಿನ ಗಮನ ಹರಿಸಬೇಕು. ಕಾವೇರಿ ನದಿಗೆ ನೀಡುವಷ್ಟೇ ಆದ್ಯತೆಯನ್ನು ಕೃಷ್ಣಾ ನದಿಗೂ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ವೇಗ:

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶಗಳಿದ್ದರೂ ಅವುಗಳ ಅನುಷ್ಠಾನ ವಿಳಂಬವಾಗುತ್ತಿರುವ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು. ಕಾನೂನು ಹಾಗೂ ನ್ಯಾಯಾಲಯದ ಆದೇಶಗಳನ್ನು ಗೌರವಿಸಿ ಸಾರ್ವಜನಿಕ ಮತ್ತು ರೈತರ ಹಿತಾಸಕ್ತಿಗೆ ಅನುಗುಣವಾಗಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೆಂಗನಾಳ ಹೇಳಿದ್ದಾರೆ.

ಮಹಾದಾಯಿ ಯೋಜನೆ ಪೂರ್ಣಗೊಳಿಸಿ:

ಕಳಸಾ-ಬಂಡೂರಿ ಮಹಾದಾಯಿ ಯೋಜನೆಯನ್ನು ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸಿ ಉತ್ತರ ಕರ್ನಾಟಕದ ಜನರು ಹಾಗೂ ರೈತರಿಗೆ ಅನುಕೂಲ ಕಲ್ಪಿಸಬೇಕು. ಕೃಷ್ಣಾ ನದಿ ವಿಚಾರದಲ್ಲಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸಬಾರದು ಎಂದು ಅವರು ಎಚ್ಚರಿಸಿದ್ದಾರೆ.
ನೀರಿನ ಸಮಸ್ಯೆಗಳು ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ರೈತರು ಸರ್ಕಾರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಲ್ಲಿಕಾರ್ಜುನ ಕೆಂಗನಾಳ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅನೀಲ ಇಕ್ಕಡೆ, ಆರ್.ಎನ್. ನಾಗಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share this