ಪ್ರತಾಪ್ ಸಿಂಹ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 25:
ದಲಿತ ಸಮುದಾಯ ಹಾಗೂ ದಲಿತ ಸಂಘರ್ಷ ಸಮಿತಿಯ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆಗಳನ್ನು ಖಂಡಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.
ಸಂಘಟನೆಯ ಮುಖಂಡ ಸಿದ್ದು ರಾಯಣ್ಣವರ ಅವರು ಪ್ರಕಟಣೆಯಲ್ಲಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ವಿಚಾರಧಾರೆ ಹಿನ್ನೆಲೆಯಲ್ಲಿ ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ದಲಿತರ ಹಕ್ಕುಗಳಿಗಾಗಿ ಹಲವು ದಶಕಗಳಿಂದ ಹೋರಾಟ ನಡೆಸಿಕೊಂಡು ಬಂದಿದೆ ಎಂದು ತಿಳಿಸಿದ್ದಾರೆ.
ಅಸ್ಪೃಶ್ಯತೆ, ಜಾತಿ ತಾರತಮ್ಯ, ಮಹಿಳಾ ಶೋಷಣೆ ಹಾಗೂ ಸಾಮಾಜಿಕ ಅನಿಷ್ಟ ಪದ್ಧತಿಗಳ ವಿರುದ್ಧ ಸಂಘಟನೆ ನಿರಂತರವಾಗಿ ಹೋರಾಟ ನಡೆಸಿದ್ದು, ಹಳ್ಳಿಹಳ್ಳಿಗಳಲ್ಲಿ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಪ್ರಜ್ಞೆಯನ್ನು ಬೆಳೆಸಿದೆ. ಈ ಮೂಲಕ ರಾಜ್ಯದ ವಿವಿಧ ಸಮುದಾಯಗಳಲ್ಲೂ ಸಾಮಾಜಿಕ ಜಾಗೃತಿ ಮೂಡಿಸಿದೆ ಎಂದು ಹೇಳಿದ್ದಾರೆ.
ಸಮಾನ ಸಮಾಜ ನಿರ್ಮಾಣ ಮತ್ತು ಸಂವಿಧಾನದ ಸಾಮಾಜಿಕ ನ್ಯಾಯದ ಆಶಯಗಳ ಉಳಿವಿಗಾಗಿ ದಲಿತರು ಹಾಗೂ ದಲಿತ ಸಂಘರ್ಷ ಸಮಿತಿ ನಡೆಸುತ್ತಿರುವ ಹೋರಾಟದ ಇತಿಹಾಸವನ್ನು ತಿಳಿಯದೆ ಪ್ರತಾಪ್ ಸಿಂಹ ಅವರು ದಲಿತ ಸಂಘಟನೆ ಹಾಗೂ ದಲಿತರನ್ನು ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಹಾಗೂ ಜಾತಿ ಸಂಘರ್ಷಕ್ಕೆ ಕಾರಣವಾಗಬಹುದಾದ ಹೇಳಿಕೆಗಳನ್ನು ನೀಡದಂತೆ ಸಾರ್ವಜನಿಕ ಜೀವನದಲ್ಲಿರುವವರು ಎಚ್ಚರಿಕೆ ವಹಿಸಬೇಕು. ಪ್ರತಾಪ್ ಸಿಂಹ ಅವರು ದಲಿತರ ಕುರಿತು ನೀಡಿರುವ ಹೇಳಿಕೆಗಳನ್ನು ಹಿಂಪಡೆದು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಇಂತಹ ಹೇಳಿಕೆಗಳ ವಿರುದ್ಧ ಸರ್ಕಾರವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಜಾತಿ ತಾರತಮ್ಯ ಮತ್ತು ದ್ವೇಷಕ್ಕೆ ಅವಕಾಶ ನೀಡದೆ ಸಂವಿಧಾನದ ಆಶಯಗಳನ್ನು ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

Share this