ವಿಜಯಪುರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:
ವಿಜಯಪುರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಅಖಿಲ ಕರ್ನಾಟಕ ರೈತ ಸಂಘ (ರಿ) ರಾಜ್ಯ ಘಟಕ ಆಗ್ರಹಿಸಿದೆ.
ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳು ಒಣಗಿ ಅಪಾರ ನಷ್ಟ ಉಂಟಾಗಿದೆ. ಆದ್ದರಿಂದ ವಿಜಯಪುರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಎಂದು ಘೋಷಿಸಿ, ರೈತರಿಗೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಸಂಚಾಲಕ ಪಾಂಡು ಮಾತನಾಡಿ, ಆಗಸ್ಟ್ ಅಂತ್ಯದವರೆಗೆ ಕಾಯುವುದಕ್ಕಿಂತ ಮೊದಲು ಸರ್ಕಾರ ಪರಿಸ್ಥಿತಿಯನ್ನು ಪರಿಶೀಲಿಸಿ ಬರ ಘೋಷಣೆ ಮಾಡಬೇಕು. ರಾಜ್ಯದ ಹಲವು ಭಾಗಗಳಲ್ಲಿ ಬರದ ಪರಿಸ್ಥಿತಿ ಸ್ಪಷ್ಟವಾಗಿದ್ದರೂ ಸರ್ಕಾರ ವಿಳಂಬ ಮಾಡುತ್ತಿರುವುದು ರೈತ ವಿರೋಧಿ ಧೋರಣೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಸಿದ್ದಾಪೂರ, ತಾಳಿಕೋಟೆ ತಾಲೂಕು ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ಉಪಾಧ್ಯಕ್ಷ ರಾಮನಗೌಡ ಹಾದಿಮನಿ, ಹೊನಕೇರಪ್ಪ ತೆಲಗಿ, ಗುರುಲಿಂಗಪ್ಪ ಪಡಸಲಗಿ, ದಾವಲಸಾಬ್ ನದಾಫ್, ಸಂಗನಗೌಡ ಕೋಳೂರ, ಬಸನಗೌಡ ಬಿರಾದಾರ, ಅಶೋಕ ಉಪ್ಪಲದಿನ್ನಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

Share this