ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:
ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ರಾಷ್ಟ್ರಭಕ್ತಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕನಿಷ್ಠ ಎರಡು ವರ್ಷಗಳ ಕಾಲ ರಾಷ್ಟ್ರೀಯ ಕೆಡೆಟ್ ದಳ (ಎನ್ಸಿಸಿ) ತರಬೇತಿಯನ್ನು ಕಡ್ಡಾಯಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಅನೇಕ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುವುದು, ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ ಅಪಘಾತಗಳಿಗೆ ಕಾರಣವಾಗುವುದು ಹಾಗೂ ಸಣ್ಣಪುಟ್ಟ ವಿಚಾರಗಳಿಗೆ ವೈಮನಸ್ಸು ಬೆಳೆಸಿ ಅಪರಾಧ ಕೃತ್ಯಗಳಲ್ಲಿ ತೊಡಗುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಲ್ಲಿ ಒತ್ತಡಮುಕ್ತ ಜೀವನ, ಆತ್ಮವಿಶ್ವಾಸ, ಸಾಮಾಜಿಕ ಜವಾಬ್ದಾರಿ ಹಾಗೂ ದೇಶಸೇವೆಯ ಮನೋಭಾವ ಬೆಳೆಸುವಲ್ಲಿ ಎನ್ಸಿಸಿ ಮಹತ್ವದ ಪಾತ್ರ ವಹಿಸುತ್ತದೆ. ಆದ್ದರಿಂದ ಕನಿಷ್ಠ ಎರಡು ವರ್ಷಗಳ ಎನ್ಸಿಸಿ ತರಬೇತಿಯನ್ನು ಕಡ್ಡಾಯಗೊಳಿಸಿ, ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ, ಉನ್ನತ ಶಿಕ್ಷಣ ಹಾಗೂ ವಿವಿಧ ಸರ್ಕಾರಿ ಯೋಜನೆಗಳಲ್ಲಿ ವಿಶೇಷ ಪ್ರೋತ್ಸಾಹ ಮತ್ತು ಹೆಚ್ಚುವರಿ ಸೌಲಭ್ಯಗಳನ್ನು ನೀಡುವಂತಹ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ಆದಾಗ್ಯೂ, ಪ್ರಸ್ತುತ ಎನ್ಸಿಸಿ ಭಾರತದಲ್ಲಿ ಸ್ವಯಂಪ್ರೇರಿತ (Voluntary) ಸಂಘಟನೆಯಾಗಿದ್ದು, ಅದನ್ನು ದೇಶದಾದ್ಯಂತ ಕಡ್ಡಾಯಗೊಳಿಸುವ ಕುರಿತು ಕೇಂದ್ರ ಸರ್ಕಾರದ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಂಸತ್ತಿನಲ್ಲಿ ಸರ್ಕಾರ ಸ್ಪಷ್ಟಪಡಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಪುನರ್ ಪರಿಶೀಲನೆ ಮಾಡಬೇಕೆಂದು ಅವರು ವಿನಂತಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಎನ್ಸಿಸಿ ಕಡ್ಡಾಯಗೊಳಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಆಗ್ರಹ


