ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ
ಸಪ್ತಸಾಗರ ವಾರ್ತೆ,ವಿಜಯಪುರ, ಆ.15 :
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಧೈರ್ಯ, ದೇಶಪ್ರೇಮ, ಸ್ವಾಭಿಮಾನ ಹಾಗೂ ಹೋರಾಟದ ಮನೋಭಾವವನ್ನು ಇಂದಿನ ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಕರೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಕಾರ್ಯಕ್ರಮದಲ್ಲಿ ಅವರು ರಾಯಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಸಂಗೊಳ್ಳಿ ರಾಯಣ್ಣ ಅವರು ಅಪ್ರತಿಮ ಸಾಹಸ, ಶೌರ್ಯ, ದೇಶಪ್ರೇಮ ಹಾಗೂ ಸ್ವಾಭಿಮಾನದ ಮೂಲಕ ಹೋರಾಡಿ, ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಅವರ ಆದರ್ಶ, ಧೈರ್ಯ, ದೇಶಭಕ್ತಿ ಹಾಗೂ ತ್ಯಾಗದ ಮೌಲ್ಯಗಳು ಸದಾ ಪ್ರೇರಣಾದಾಯಕವಾಗಿವೆ. ಯುವಜನತೆ ಅವರ ಜೀವನಾದರ್ಶಗಳನ್ನು ಅರಿತು ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ್ ಭೋವಿ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.


