ಸಪ್ತಸಾಗರ ವಾರ್ತೆ,ವಿಜಯಪುರ, ಆ.5: ಜಿಲ್ಲೆಯ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಿ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಸೇರ್ಪಡೆಯಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ವಿಡಿಯೊ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಗಸ್ಟ್ 4ರವರೆಗೆ ಜಿಲ್ಲೆಯಲ್ಲಿ 16,79,495 ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿದ್ದು, ಆನ್‌ಲೈನ್ ಮೂಲಕ 4,069 ಮತದಾರರು ನಮೂನೆ ಸಲ್ಲಿಸಿದ್ದಾರೆ. ಪರಿಶೀಲನೆ ವೇಳೆ 1,52,859 ಶಾಶ್ವತವಾಗಿ ಸ್ಥಳಾಂತರಗೊಂಡವರು, 54,549 ಮೃತರು ಹಾಗೂ 63,602 ಗೈರುಹಾಜರಾತಿ ಅಥವಾ ಸಂಪರ್ಕಕ್ಕೆ ಸಿಗದ ಮತದಾರರನ್ನು ಗುರುತಿಸಲಾಗಿದೆ. ಇದೇ ವೇಳೆ 29,623 ಹೊಸ ಮತದಾರರು ನೋಂದಾಯಿಸಿಕೊಂಡಿದ್ದಾರೆ.
ಮುಧೋಳ, ದೇವರಹಿಪ್ಪರಗಿ, ಬಸವನ ಬಾಗೇವಾಡಿ, ಬಬಲೇಶ್ವರ, ವಿಜಯಪುರ ನಗರ, ನಾಗಠಾಣ, ಇಂಡಿ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಎಲ್‌ಒಗಳು ನಿಗದಿತ ಅವಧಿಯೊಳಗೆ ಕಾರ್ಯ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ASDDO ಪಟ್ಟಿ ಸಾರ್ವಜನಿಕ ಪರಿಶೀಲನೆಗೆ ಲಭ್ಯ
ಗೈರುಹಾಜರಾತಿ, ವಲಸೆ, ಮರಣ, ಡುಪ್ಲಿಕೇಟ್ ಹಾಗೂ ಇತರೆ (ASDDO) ಮತದಾರರ ಮಾಹಿತಿಯನ್ನು ಪ್ರತಿದಿನ ಜಿಲ್ಲಾ ಆಡಳಿತದ ವೆಬ್‌ಸೈಟ್‌ನಲ್ಲಿ ಹಾಗೂ ಪ್ರಕಟಿತ ಗೂಗಲ್ ಲಿಂಕ್‌ಗಳ ಮೂಲಕ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ. ಈ ಪಟ್ಟಿಯನ್ನು ರಾಜಕೀಯ ಪಕ್ಷಗಳು, ಮತಗಟ್ಟೆ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳು, ತಹಶೀಲ್ದಾರ್ ಹಾಗೂ ತಾಲ್ಲೂಕು ಕಚೇರಿಗಳಲ್ಲಿಯೂ ಪ್ರಕಟಿಸಲಾಗುತ್ತಿದೆ.
ಪಟ್ಟಿಯಲ್ಲಿ ಯಾವುದೇ ಅನುಮಾನ ಅಥವಾ ದೋಷ ಕಂಡುಬಂದಲ್ಲಿ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿಗಳಿಗೆ ಮಾಹಿತಿ ನೀಡಬಹುದು. ಪರಿಶೀಲನೆ ಬಳಿಕ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಆಗಸ್ಟ್ 17ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ
ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಆಗಸ್ಟ್ 17ರಿಂದ ಸೆಪ್ಟೆಂಬರ್ 16, 2026ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳ (Claims & Objections) ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಅರ್ಹ ಮತದಾರರು ನಮೂನೆ–6 ಅನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಸಲ್ಲಿಸಿ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಿಕೊಳ್ಳಬಹುದು. 2026ರ ಅಕ್ಟೋಬರ್ 1ಕ್ಕೆ 18 ವರ್ಷ ಪೂರೈಸುವ ಯುವಕರಿಗೂ ಇದೇ ಅವಧಿಯಲ್ಲಿ ಮತದಾರರಾಗಿ ನೋಂದಾಯಿಸಿಕೊಳ್ಳುವ ಅವಕಾಶವಿದೆ.
ಜಿಲ್ಲಾಧಿಕಾರಿಗಳು ನೀಡಿರುವ ಚುನಾವಣಾ ನೋಟಿಸ್ ಮಾಹಿತಿ ಪತ್ರವಾಗಿದ್ದು, ಮತದಾರರು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಿ ತಮ್ಮ ಹೆಸರು ಅಂತಿಮ ಮತದಾರರ ಪಟ್ಟಿಯಲ್ಲಿ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಸಭೆಯಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಚುನಾವಣಾ ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು.


