ಎಸ್‌ಸಿ, ಎಸ್‌ಟಿ ಮೀಸಲಾತಿ ರಕ್ಷಿಸಲು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ:ಚಲವಾದಿ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 17: ಜನಸಂಖ್ಯೆ ಆಧಾರಿತ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ಮೀಸಲಾತಿಯನ್ನು ರಕ್ಷಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಶ್ರೀಶೈಲ ಚಲವಾದಿ ಆಗ್ರಹಿಸಿದ್ದಾರೆ.
ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವ ಅಧಿಕಾರವನ್ನು ಸಂವಿಧಾನ ಸರ್ಕಾರಗಳಿಗೆ ನೀಡಿದೆ. ಆದರೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಸರ್ಕಾರಗಳು ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತರ ಸಂವಿಧಾನಾತ್ಮಕ ಹಕ್ಕುಗಳ ವಿಚಾರದಲ್ಲಿ ನಿರಂತರವಾಗಿ ಅನ್ಯಾಯ ಮಾಡುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ಸಂವಿಧಾನಾತ್ಮಕ ಹಕ್ಕುಗಳನ್ನು ಪಡೆಯಲು ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ಸಮುದಾಯಗಳು ಹೋರಾಟ, ಧರಣಿ ಮತ್ತು ಸತ್ಯಾಗ್ರಹ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಾಲ್ಮೀಕಿ ಸಮುದಾಯದ ಪ್ರಸನ್ನಾನಂದಪುರಿ ಸ್ವಾಮೀಜಿ ರಾಜನಹಳ್ಳಿಯಿಂದ ಬೆಂಗಳೂರಿಗೆ ಸುಮಾರು 400 ಕಿ.ಮೀ. ಪಾದಯಾತ್ರೆ ನಡೆಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 262 ದಿನಗಳ ಕಾಲ ಧರಣಿ ನಡೆಸಿದ್ದರು. ಈ ಹೋರಾಟಕ್ಕೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಪೂರ್ಣ ಬೆಂಬಲ ನೀಡಿ ಧರಣಿ, ಸತ್ಯಾಗ್ರಹದಲ್ಲಿ ನಿರಂತರವಾಗಿ ಭಾಗವಹಿಸಿತ್ತು ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ವಿಳಂಬ ಮಾಡದೆ ಕಾನೂನು ಹೋರಾಟವನ್ನು ಮುಂದುವರಿಸಿ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಸಂರಕ್ಷಿಸಬೇಕು ಎಂದು ಚಲವಾದಿ ಒತ್ತಾಯಿಸಿದ್ದಾರೆ.

Share this