ವಿಜಯಪುರದಲ್ಲಿ ಮೇ 17 ರಿಂದ ಪ್ರಪ್ರಥಮ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ: ಪಂದ್ಯಾಟದಲ್ಲಿ 756 ಆಟಗಾರರು ಭಾಗಿ- ಕುಮಾರ ಬಂಗಾರಪ್ಪ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:
ಐತಿಹಾಸಿಕ ಗುಮ್ಮಟ ನಗರಿ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಮೇ 17 ರಿಂದ ಆಯೋಜಿಸಲಾಗಿದೆ ಎಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಕುಮಾರ ಬಂಗಾರಪ್ಪ ತಿಳಿಸಿದರು.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಬಿಎಲ್‌ಡಿಇ ಸಂಸ್ಥೆಯ ಸಹಯೋಗದಲ್ಲಿ ಅನೆಕ್ಸ್ ಸನ್ ರೈಸರ್ ಟೈಟಲ್ ಕಾರ್ಡ್ ನಡಿ ಈ ಪಂದ್ಯಾವಳಿ ನಡೆಯಲಿದೆ ಎಂದರು.
ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ 756 ಕ್ರೀಡಾಪಟುಗಳು ನೋಂದಾಯಿಸಿಕೊಂಡಿದ್ದು, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಆಟಗಾರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಪಂದ್ಯಾವಳಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಉದ್ಘಾಟಿಸಲಿದ್ದು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಅಸೋಸಿಯೇಷನ್ ಹಿನ್ನೆಲೆ: 1951 ರಲ್ಲಿ ‘ಮೈಸೂರು ಬ್ಯಾಡ್ಮಿಂಟನ್ ಅಸೋಸಿಯೇಷನ್’ ಆಗಿ ಆರಂಭಗೊಂಡ ಸಂಸ್ಥೆ, 1972 ರಲ್ಲಿ ಕರ್ನಾಟಕ ನಾಮಕರಣದ ಬಳಿಕ ‘ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್’ ಎಂದು ಮರುನಾಮಕರಣಗೊಂಡಿತು. ಮೈಸೂರು ಒಡೆಯರಿಂದ ಆರಂಭಗೊಂಡ ಈ ಸಂಸ್ಥೆ 1992 ರ ವೇಳೆಗೆ ದೊಡ್ಡ ಸಂಸ್ಥೆಯಾಗಿ ಬೆಳೆದು, ಇಂದು ದೇಶದಲ್ಲೇ ಪ್ರಮುಖ ಬ್ಯಾಡ್ಮಿಂಟನ್ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಕುಮಾರ ಬಂಗಾರಪ್ಪ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಎಸ್.ಎಸ್. ಕೋರಿ, ಗಿರೀಶ ಕುಲ್ಲೊಳ್ಳಿ, ಯುವಜನ ಸೇವೆ ಮತ್ತು ಸಬಲೀಕರ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ಮತ್ತಿತರರು ಉಪಸ್ಥಿತರಿದ್ದರು.

Share this