ಪ್ರಯಾಣಿಕ ಸ್ನೇಹಿ ಸಾರಿಗೆಗೆ ಒತ್ತು: ಕೆಕೆಆರ್‌ಟಿಸಿ ಸೇವೆಗಳ ಉನ್ನತೀಕರಣಕ್ಕೆ ಅಧ್ಯಕ್ಷ ಅರುಣಕುಮಾರ ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:
ಪ್ರಯಾಣಿಕರಿಗೆ ಮತ್ತಷ್ಟು ಜನಸ್ನೇಹಿ, ಸುರಕ್ಷಿತ ಹಾಗೂ ಸುಗಮ ಸಾರಿಗೆ ಸೇವೆ ಒದಗಿಸಲು ಅಧಿಕಾರಿಗಳು ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಅಧ್ಯಕ್ಷ ಅರುಣಕುಮಾರ ಎಂ.ವೈ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರ ವಿಭಾಗೀಯ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿಗಮದ ಸೇವಾ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸುವ ಉದ್ದೇಶದಿಂದ ನಡೆದ ಸಭೆಯಲ್ಲಿ ಬಸ್ ನಿಲ್ದಾಣಗಳ ಸ್ವಚ್ಛತೆ, ನೈರ್ಮಲ್ಯ, ಪ್ರಯಾಣಿಕರಿಗೆ ಅಗತ್ಯ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಹಾಗೂ ಬಸ್‌ಗಳ ಸಕಾಲಿಕ ನಿರ್ವಹಣೆ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು.
ಬಸ್‌ಗಳ ಸಮಯ ಪಾಲನೆಗೆ ಆದ್ಯತೆ ನೀಡಬೇಕು. ಇಂಧನ ಉಳಿತಾಯಕ್ಕೆ ಪೂರಕವಾದ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ, ಕಾರ್ಯಾಚರಣೆಯ ದಕ್ಷತೆ ಹೆಚ್ಚಿಸುವ ಜೊತೆಗೆ ರಸ್ತೆ ಸುರಕ್ಷತಾ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ನಿಗಮದ ಸೇವೆಯನ್ನು ಇನ್ನಷ್ಟು ವಿಶ್ವಾಸಾರ್ಹವಾಗಿಸಬೇಕು ಎಂದು ಅಧ್ಯಕ್ಷರು ನಿರ್ದೇಶನ ನೀಡಿದರು.
ಸಂಸ್ಥೆಯ ಬೆನ್ನೆಲುಬಾಗಿರುವ ಸಿಬ್ಬಂದಿಯ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿಗೂ ವಿಶೇಷ ಮಹತ್ವ ನೀಡಿದ ಅವರು, ಸಿಬ್ಬಂದಿಗಾಗಿ ನಿಯಮಿತ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಸೂಚಿಸಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಸೇವೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ನಿಗಮದ ಪ್ರತಿಯೊಂದು ಸೇವೆಯೂ ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಅಧಿಕಾರಿಗಳು ಮತ್ತು ಸಿಬ್ಬಂದಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪ್ರಯಾಣಿಕರ ವಿಶ್ವಾಸ ಮತ್ತು ನಂಬಿಕೆಯನ್ನು ಇನ್ನಷ್ಟು ಬಲಪಡಿಸುವುದೇ ನಿಗಮದ ಪ್ರಮುಖ ಗುರಿಯಾಗಿದೆ ಎಂದು ಅರುಣಕುಮಾರ ಪಾಟೀಲ ಹೇಳಿದರು.
ಸಭೆಯಲ್ಲಿ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ದೇವಾನಂದ ಎ. ಬಿರಾದಾರ ಸೇರಿದಂತೆ ವಿಭಾಗದ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share this